ದೇಶದ ಮೊದಲ ಸಿಡಿಎಸ್ ಬಿಪಿನ್ ರಾವತ್ ಸಾವನ್ನಪ್ಪಿದ್ದಕ್ಕೆ ಹಲವರು ಸಂಭ್ರಮಾಚರಣೆ ಆಚರಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಅಂತಹ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದೆ.
ಹಲವು ವಿಕೃತ ಮನಸ್ಸಿನ ವ್ಯಕ್ತಿಗಳು ಸಾಮಾಜಿಕ ಜಾಲತಾಣದ ಮೂಲಕ ಸಂಭ್ರಮಾಚರಣೆ ಆಚರಿಸಿದ್ದಕ್ಕೆ ಗರಂ ಆಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಅದರ ಬೆನ್ನಲ್ಲಿಯೇ ಪ್ರಕರಣ ಈಗ ದಾಖಲಾಗಿದೆ.
ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ 3 ಫೇಸ್ ಬುಕ್ ಪೋಸ್ಟ್ ಗಳ ಆಧಾರದ ಮೇಲೆ ಮೂವರ ಮೇಲೆ ಪ್ರಕರಣ ದಾಖಲಾಗಿದೆ. ಒಬ್ಬರ ಮಾಹಿತಿ ಇನ್ನೂ ಸಿಕ್ಕಿಲ್ಲ. ಇನ್ನುಳಿದ ಇಬ್ಬರಲ್ಲಿ ಓರ್ವ ವ್ಯಕ್ತಿ ಕಾರ್ಕಳ ಹಾಗೂ ಇನ್ನೊಬ್ಬ ವ್ಯಕ್ತಿ ಬೆಂಗಳೂರು ಮೂಲದವರು ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ವಿಕೃತವಾಗಿ ಪೋಸ್ಟ್ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಆದೇಶ ನೀಡಿದ್ದಾರೆ. ದುಷ್ಕರ್ಮಿಗಳ ವಿಳಾಸ ಪತ್ತೆ ಹಚ್ಚಿ ತಕ್ಕ ಶಿಕ್ಷೆ ನೀಡಬೇಕು ಎಂದು ದೂರವಾಣಿ ಮೂಲಕ ಗೃಹ ಸಚಿವರ ಡಿಜಿಪಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇನ್ನೊಂದೆಡೆ ಉಡುಪಿ ಮೂಲದ ವ್ಯಕ್ತಿಯೊಬ್ಬರ ಪೋಸ್ಟ್ ಗೆ ತೀವ್ರ ವಿರೋಧ ಹಾಗೂ ಆಕ್ರೋಶ ವ್ಯಕ್ತವಾಗಿದೆ. ಜನರು ಉಡುಪಿ ಪೊಲೀಸರಿಗೆ ಟ್ಯಾಗ್ ಮಾಡುವುದರ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ, ಅವರ ವಿರುದ್ಧ ದೂರು ದಾಖಲಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.