ಕೊರೊನಾ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೇಶದ ಬಹುತೇಕ ರಾಜ್ಯಗಳಲ್ಲಿ ತಾಂಡವಾಡುತ್ತಿದೆ. ಮಹಾರಾಷ್ಟ್ರದಲ್ಲಂತೂ ಇದರ ಪರಿಸ್ಥಿತಿ ಹೇಳತೀರದಾಗಿದೆ. ಇದೀಗ ಬಿಸಿಸಿಐ ಅಂಗಳಕ್ಕೂ ಸೋಂಕು ಹಬ್ಬಿದೆ.
ಮುಂಬಯಿನಲ್ಲಿರುವ ಬಿಸಿಸಿಐನ ಮುಖ್ಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೂವರು ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದಾಗಿ ಕಚೇರಿಯನ್ನು ಮೂರು ದಿನಗಳ ಕಾಲ ಬಂದ್ ಮಾಡಲಾಗಿದೆ.
ಸದ್ಯ ಸೋಂಕಿತ ಸಿಬ್ಬಂದಿ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕಚೇರಿಯಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿನ ಒಟ್ಟು 15 ಸಿಬ್ಬಂದಿಗೆ ಸೋಂಕು ಆವರಿಸಿದೆ.
ಸದ್ಯ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಅವರ ಪುತ್ರಿಗೂ ಪಾಸಿಟಿವ್ ಬಂದಿದ್ದು, ಅವರು ಕೂಡ ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ. ಮತ್ತೊಮ್ಮೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಣಜಿ ಟ್ರೋಫಿ ಸೇರಿದಂತೆ ಹಲವು ಬಗೆಯ ರಾಷ್ಟ್ರೀಯ ಮಟ್ಟದ ಟೂರ್ನಿಗಳನ್ನು ರದ್ದು ಮಾಡಲಾಗಿದೆ ಎಂದು ಬಿಸಿಸಿಐ ಹೇಳಿದೆ.