ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಸಂಜೆ ಮಳೆ ಸುರಿಯುತ್ತಿದೆ. ಗುಡುಗು-ಸಿಡಿಲಿನ ಸಮೇತ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ.
ಇಂದು ಸಹ ಸುರಿದ ಧಾರಾಕಾರ ಮಳೆಗೆ ವಾಹನ ಸವಾರರು ಪರದಾಡುವಂತಾಗಿದೆ. ವಸಂತ ನಗರ ಮತ್ತು ಚಿಕ್ಕಪೇಟೆಯಲ್ಲಿ ಸುರಿದ ಭಾರಿ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಕೆಪಿ ಅಗ್ರಹಾರ ದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ನೂರಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.
ಕೇವಲ 15 ನಿಮಿಷ ಸುರಿದ ಮಳೆಗೆ ರಸ್ತೆಗಳು ಕೆರೆಗಳಂತೆ ಆಗಿವೆ. ಇದೀಗ ರಸ್ತೆಗಳಲ್ಲಿ ನೀರು ಕಡಿಮೆಯಾಗಿದ್ದು ವಾಹನ ಸವಾರರು ಮಳೆಯಲ್ಲೇ ಮನೆಗೆ ತೆರಳಲು ಸಜ್ಜಾಗುತ್ತಿದ್ದಾರೆ.
ಮುಂಗಾರು ಮಳೆ ಆರಂಭಗೊಂಡಿದ್ದು, ಯಾವುದೇ ಸೂಕ್ತ ಮುನ್ನೆಚ್ಚರಿಕಾ ಕ್ರಮ ಗಳನ್ನು ಕೈಗೊಳ್ಳದೆ ಇರುವುದು ಅವಾಂತರಕ್ಕೆ ಕಾರಣವಾಗಿದೆ.