ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಿಂದ ತಾವು ಕಣಕ್ಕೆ ಇಳಿಯುವುದಿಲ್ಲ. ಬದಲಾಗಿ ತಮ್ಮ ಪುತ್ರ ನಿತಿನ್ ಪುರುಷೋತ್ತಮ್ ಸ್ಪರ್ಧಿಸುತ್ತಾರೆ ಎಂದು ಹೇಳುವ ಮೂಲಕ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅಚ್ಚರಿ ಮೂಡಿಸಿದ್ದಾರೆ.
ಭಾನುವಾರದಂದು ಸಭೆಯೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಈ ವಿಷಯ ತಿಳಿಸಿದ ಅವರು, ಈ ಚುನಾವಣೆಯಲ್ಲಿ ತಮ್ಮ ಮಗನನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಎಂಟಿಬಿ ನಾಗರಾಜ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕೇಳಿ ಬರುತ್ತಿದ್ದ ವದಂತಿಗೆ ತೆರೆ ಎಳೆದಿದ್ದಾರೆ.
ಆದರೆ ಟಿಕೆಟ್ ನೀಡುವ ಕುರಿತು ಅಂತಿಮವಾಗಿ ಬಿಜೆಪಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕಿದ್ದು, ಆದರೆ ಅದಕ್ಕೂ ಮುನ್ನವೇ ತಮ್ಮ ಮಗನೇ ಹೊಸಕೋಟೆ ಕ್ಷೇತ್ರದ ಅಭ್ಯರ್ಥಿ ಎಂದು ಎಂಟಿಬಿ ನಾಗರಾಜ್ ಹೇಳಿರುವುದು ಈಗ ಚರ್ಚೆಗೆ ಕಾರಣವಾಗಿದೆ. ಕಳೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಂಟಿಬಿ ನಾಗರಾಜ್, ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ವಿರುದ್ಧ ಪರಾಭವಗೊಂಡಿದ್ದರು.