alex Certify ಮಧ್ಯರಾತ್ರಿಯಲ್ಲೇ ಸಿಎಂ ದಿಢೀರ್ ನಿರ್ಧಾರ; ಇಂದಿನ ‘ಜನೋತ್ಸವ’ ರದ್ದಾಗಿದ್ದರ ಹಿಂದಿದೆ ಈ ಕಾರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧ್ಯರಾತ್ರಿಯಲ್ಲೇ ಸಿಎಂ ದಿಢೀರ್ ನಿರ್ಧಾರ; ಇಂದಿನ ‘ಜನೋತ್ಸವ’ ರದ್ದಾಗಿದ್ದರ ಹಿಂದಿದೆ ಈ ಕಾರಣ

ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಇದಕ್ಕಾಗಿ ಸಕಲ ಸಿದ್ಧತೆಗಳನ್ನೂ ಕೈಗೊಂಡಿದ್ದು, 29 ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಹಾಕಲಾಗಿತ್ತು.

ಈ ಸಮಾವೇಶದಲ್ಲಿ 2 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಲು ಬಿಜೆಪಿ ತಯಾರಿ ನಡೆಸಿದ್ದರ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವು ಗಣ್ಯರು ಇದರಲ್ಲಿ ಭಾಗಿಯಾಗಲಿದ್ದರು. ವಿಧಾನಸಭಾ ಚುನಾವಣೆ ಸಮೀಪದಲ್ಲಿರುವ ಕಾರಣ ಈ ಸಮಾವೇಶದ ಮೂಲಕ ಚುನಾವಣಾ ರಣಕಹಳೆಯನ್ನು ಮೊಳಗಿಸಲು ಸಹ ಸಿದ್ಧತೆ ನಡೆಸಲಾಗಿತ್ತು.

ಆದರೆ ಮಧ್ಯರಾತ್ರಿ ದಿಢೀರ್ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿನ ಜನೋತ್ಸವ ಸಮಾವೇಶ ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ, ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪ ನಡೆದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.

ಪ್ರವೀಣ್ ನೆಟ್ಟಾರು ಅವರ ಹತ್ಯೆಯ ವಿಚಾರ ತಿಳಿಯುತ್ತಿದ್ದಂತೆ ರಾಜ್ಯದಾದ್ಯಂತ ಹಿಂದೂ ಸಂಘಟನೆಗಳ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿತ್ತು. ಕೇಂದ್ರ ಹಾಗೂ ರಾಜ್ಯದಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿದ್ದರೂ ಸಹ ಬಿಜೆಪಿ ಯುವ ನಾಯಕನಿಗೆ ರಕ್ಷಣೆ ನೀಡಲಾಗದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿ ಕಾರಲಾಗಿತ್ತು.

ಅಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರುಗಳು ಸಾಮೂಹಿಕ ರಾಜೀನಾಮೆ ನೀಡಲು ಆರಂಭಿಸಿದ್ದರು. ಜೊತೆಗೆ ಇಂದು ನಡೆಯಲಿರುವ ಜನೋತ್ಸವ ಸಮಾವೇಶದಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿತ್ತು.

ಈ ವಿಚಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸಹೋದ್ಯೋಗಿಗಳ ತಲೆ ಬಿಸಿಗೆ ಕಾರಣವಾಗಿತ್ತು. ಸಮಾವೇಶದ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರೇ ಘೋಷಣೆಗಳನ್ನು ಕೂಗಿದರೆ ಇದು ತೀವ್ರ ಮುಜುಗರಕ್ಕೆ ಕಾರಣವಾಗುತ್ತದೆ ಎಂಬ ಅಭಿಪ್ರಾಯಕ್ಕೆ ಬಂದು ಅಂತಿಮವಾಗಿ ಜನೋತ್ಸವ ಸಮಾವೇಶ ರದ್ದುಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...