ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೂಡಲೇ ಪರಿಹಾರ ಸೇರಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಡಿಕೆಗಿಂತ ಭಾರೀ ಪ್ರಮಾಣದಲ್ಲಿ ಹೆಚ್ಚಿನ ಮಳೆಯಾಗಿದೆ. ಜಿಲ್ಲೆಯಲ್ಲಿ 291 ಮನೆಗಳು ಹಾನಿಯಾಗಿದ್ದು, ಅಧಿಕಾರಿಗಳು ಸರ್ವೇ ನಡೆಸಿ ಪರಿಹಾರ ವಿತರಿಸಲಿದ್ದಾರೆ. ಮಳೆ ನಿಂತ ನಂತರ ಬೆಳೆ ಹಾನಿ ಸಮೀಕ್ಷೆ ನಡೆಸಿ ಬೆಳೆ ಹಾನಿಗೆ ಪರಿಹಾರ ನೀಡಲಾಗುವುದು ಎಂದರು.
ಮೇ ತಿಂಗಳಲ್ಲಿ ಸುರಿದ ಮಳೆಯಿಂದಾದ ನಷ್ಟಕ್ಕೆ ಪರಿಹಾರ ವಿತರಣೆ ಕಾರ್ಯ ಪ್ರಗತಿಯಲ್ಲಿದೆ. ಪರಿಹಾರ ನೀಡಿಲ್ಲವೆಂದು ವಿನಾಕಾರಣ ಆರೋಪ ಮಾಡುವುದು ಸರಿಯಲ್ಲ. ಅಧಿಕಾರಿಗಳು ಮಳೆಯಿಂದಾದ ಹಾನಿ ಬಗ್ಗೆ ಪರಿಶೀಲನೆ ನಡೆಸಿ ಪರಿಹಾರ ವಿತರಿಸಲಿದ್ದಾರೆ. ಮನೆಗಳ ನಿರ್ಮಾಣಕ್ಕೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ಮನೆ ಹಾನಿಗೊಳಗಾದವರಿಗೆ ತಕ್ಷಣವೇ 10 ಸಾವಿರ ರೂ. ನೀಡಲಾಗುವುದು. ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರ ತೆರೆಯಲು ಸೂಚನೆ ನೀಡಲಾಗಿದೆ. ಹಣದ ಕೊರತೆ ಇಲ್ಲ. ನಿನ್ನೆಯಷ್ಟೇ ಮುಖ್ಯಮಂತ್ರಿಗಳು ಅತಿವೃಷ್ಠಿ ನಿರ್ವಹಣೆಗೆ 500 ಕೋಟಿ ರೂ. ಅನುದಾನ ನೀಡಿದ್ದಾರೆ. ಅಧಿಕಾರಿಗಳು, ಸಿಬ್ಬಂದಿ ಹಾನಿ ಪರಿಶೀಲನೆ ನಡೆಸಿ ಪರಿಹಾರ ವಿತರಿಸಲಿದ್ದಾರೆ ಎಂದರು.
ಮಳೆಯಿಂದ ಭಾರಿ ಪ್ರಮಾಣದ ಹಾನಿಗೊಳಗಾದ ಪ್ರದೇಶಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಣ್ಣ ಪ್ರಮಾಣದ ಹಾನಿಯಾಗಿದ್ದಲ್ಲಿ ಕಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡಲಿದ್ದಾರೆ. ಎಲ್ಲಾ ಸಂತ್ರಸ್ಥರಿಗೆ ತಕ್ಷಣವೇ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.