ಈ ಬಾರಿ ರಾಜ್ಯಕ್ಕೆ ಮುಂಗಾರು ವಿಳಂಬವಾಗಿ ಪ್ರವೇಶಿಸಿದ್ದಲ್ಲದೆ ಮಳೆಯೂ ಕೂಡ ವ್ಯಾಪಕವಾಗಿ ಆಗುತ್ತಿಲ್ಲ. ಹೀಗಾಗಿ ಜಲಾಶಯಗಳು ಭರ್ತಿಯಾಗದೆ ಜಲ ವಿದ್ಯುತ್ ಉತ್ಪಾದನೆ ಗಣನೀಯವಾಗಿ ಕುಸಿದಿದ್ದು, ಇದರ ಮಧ್ಯೆ ಮತ್ತೊಂದು ಶಾಕ್ ಎದುರಾಗಿದೆ.
ತಾಂತ್ರಿಕ ಸಮಸ್ಯೆಯಿಂದಾಗಿ ಶಕ್ತಿನಗರ ಬಳಿಯ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ (ಆರ್ ಟಿ ಪಿ ಎಸ್) ದ ನಾಲ್ಕು ಘಟಕಗಳು ಸ್ಥಗಿತಗೊಂಡಿದ್ದು, ಒಟ್ಟು 1,720 ಮೆಗಾ ವ್ಯಾಟ್ ಸಾಮರ್ಥ್ಯದ ಈ ಕೇಂದ್ರದಿಂದ ಸದ್ಯ ಕೇವಲ 447 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಶಾಖೋತ್ಪನ್ನ ವಿದ್ಯುತ್ ಕೇಂದ್ರದ ನಾಲ್ಕು, ಐದು, ಏಳು ಹಾಗೂ ಎಂಟನೇ ಘಟಕಗಳು ಸ್ಥಗಿತಗೊಂಡಿದ್ದು, ಹೀಗಾಗಿ ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ. ಜಲಾಶಯಗಳು ಸಹ ನಿರೀಕ್ಷಿತ ಪ್ರಮಾಣದಲ್ಲಿ ತುಂಬದಿರುವ ಕಾರಣ ಜಲ ವಿದ್ಯುತ್ ಉತ್ಪಾದನೆಯೂ ಸಹ ಕುಸಿತ ಕಂಡಿದ್ದು, ಮುಂದಿನ ದಿನಗಳಲ್ಲಿ ವ್ಯಾಪಕ ಮಳೆಯಾಗಿ ಜಲಾಶಯಗಳು ಭರ್ತಿಯಾಗದಿದ್ದರೆ ವಿದ್ಯುತ್ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.