ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಂಬಾಲಿಸಿಕೊಂಡು ಬಂದ ಗುಂಪು, ಆತನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಆದಿಗಾನಹಳ್ಳಿ ಗ್ರಾಮದ 38 ವರ್ಷದ ಶ್ರೀನಿವಾಸ್ ಹತ್ಯೆಯಾದ ವ್ಯಕ್ತಿಯಾಗಿದ್ದು, ಈತ ಕೆಲಸ ಮುಗಿಸಿಕೊಂಡು ಬರುವ ವೇಳೆ ದುಷ್ಕರ್ಮಿಗಳು ಹಿಂಬಾಲಿಸಿಕೊಂಡು ಬಂದು ಮಚ್ಚಿನಿಂದ ತಲೆಗೆ ಹೊಡೆದಿದ್ದಾರೆ. ಮಾರಣಾಂತಿಕ ದಾಳಿಯ ಪರಿಣಾಮ ಶ್ರೀನಿವಾಸ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಅನೈತಿಕ ಸಂಬಂಧವೇ ಈ ಕೊಲೆಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.