ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಜಾತ್ಯಾತೀತ ಜನತಾದಳ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಮುಂದಿನ ವಾರ ಎರಡನೇ ಪಟ್ಟಿ ಪ್ರಕಟವಾಗಲಿದೆ ಎಂದು ಹೇಳಲಾಗಿದ್ದು, ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಂತೆ ಎಲ್ಲರಲ್ಲೂ ಕುತೂಹಲ ಮೂಡಿದೆ.
ರಾಜ್ಯದಾದ್ಯಂತ ಪಂಚರತ್ನ ರಥಯಾತ್ರೆ ನಡೆಸುತ್ತಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರದಂದು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದು, ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಹಾಸನ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಎಚ್.ಡಿ. ರೇವಣ್ಣನವರ ಪತ್ನಿ ಭವಾನಿ ರೇವಣ್ಣ ಸಿದ್ಧತೆ ನಡೆಸಿದ್ದು, ಮಾಜಿ ಶಾಸಕ ಪ್ರಕಾಶ್ ಅವರ ಪುತ್ರ ಸ್ವರೂಪ್ ಕೂಡ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಈ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ.
ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಮಾಡದಿದ್ದರೂ ಸಹ ಭವಾನಿ ರೇವಣ್ಣ ಹಾಗೂ ಸ್ವರೂಪ್ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಹೀಗಾಗಿ ಇವರಿಬ್ಬರಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.