ಕಾಮಗಾರಿಗಳನ್ನು ಪೂರೈಸಿದರೂ ಸಹ ಕಳೆದ ಎರಡು ವರ್ಷಗಳಿಂದ ಗುತ್ತಿಗೆದಾರರ ಹಣ ಬಿಡುಗಡೆ ಮಾಡದಿರುವುದಕ್ಕೆ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಗಳೇ ಗುತ್ತಿಗೆದಾರರ ಬಳಿ ಹಣದ ಮಂತ್ರದಂಡ ಇಲ್ಲ. ಅವರೂ ಸಹ ಶ್ರೀಸಾಮಾನ್ಯರಲ್ಲಿ ಒಬ್ಬರು ಎಂದು ಕಿಡಿ ಕಾರಲಾಗಿದೆ.
ಬೆಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಕೆಂಪಣ್ಣ, ವಿವಿಧ ಇಲಾಖೆಗಳಿಂದ ಸುಮಾರು 22 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಬಿಡುಗಡೆಯಾಗಬೇಕಿದ್ದು, ಈ ಪೈಕಿ ನೀರಾವರಿ, ಲೋಕೋಪಯೋಗಿ ಮತ್ತು ಬಿಬಿಎಂಪಿಯಿಂದ ಅತಿ ಹೆಚ್ಚು ಹಣ ಬರಬೇಕಿದೆ ಎಂದು ತಿಳಿಸಿದರು.
ಶೇಕಡಾ 80ರಷ್ಟು ಮೊತ್ತವನ್ನು ಹಿರಿತನದ ಆಧಾರದ ಮೇಲೆ ಹಾಗೂ ಶೇಕಡ 20ರಷ್ಟು ಮೊತ್ತವನ್ನು ವಿವೇಚನಾ ಕೋಟಾದಲ್ಲಿ ಬಿಡುಗಡೆ ಮಾಡಬೇಕು ಎಂಬ ನಿಯಮವಿದ್ದರೂ ಸಹ ಅದನ್ನು ಉಲ್ಲಂಘಿಸಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ಚುನಾವಣೆ ಅಧಿಸೂಚನೆ ಹೊರಡಿಸುವುದಕ್ಕೂ ಮುನ್ನ ಗುತ್ತಿಗೆದಾರರ ಬಾಕಿ ಮೊತ್ತವನ್ನು ಹಿರಿತನದ ಆಧಾರದ ಮೇಲೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ ಅವರು, ಒಂದು ವೇಳೆ ಸರ್ಕಾರ ಈ ಕೆಲಸ ಮಾಡದಿದ್ದರೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಹಾಗೂ ಅಂತಿಮವಾಗಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.