ದೆಹಲಿಯಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಆತ್ಮಹತ್ಯೆ ಸರಣಿ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಇಬ್ಬರು ಸಾವಿಗೆ ಶರಣಾಗಿದ್ದಾರೆ. ಮಂಡಿ ಹೌಸ್‌ನಲ್ಲಿ ವ್ಯಕ್ತಿಯೊಬ್ಬ ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ನಿಶಾನ್ ಅಲಿ ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ. 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಇದು ಎರಡನೇ ಘಟನೆಯಾಗಿದೆ.
ಮಂಗಳವಾರ ಬೆಳಗ್ಗೆ ನೋಯ್ಡಾದಲ್ಲಿ ಮೆಟ್ರೋ ರೈಲಿನೆದುರು ಜಿಗಿದು 16 ವರ್ಷದ ಬಾಲಕ ಸಾವನ್ನಪ್ಪಿದ್ದ. ಬ್ಲೂ ಲೈನ್ ಮೆಟ್ರೋ ಎದುರು ಜಿಗಿಯುವ ಮೊದಲು ಬಾಲಕ ಗಾಲ್ಫ್ ಕೋರ್ಸ್ ಮೆಟ್ರೋ ನಿಲ್ದಾಣದಲ್ಲಿ ಸ್ವಲ್ಪ ಸಮಯ ಕಾಯುತ್ತಿದ್ದ. ನೋಯ್ಡಾ ಸೆಕ್ಟರ್ 36ರ ನಿವಾಸಿಯಾಗಿದ್ದ ಬಾಲಕನನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲು ಮಾಡಲಾಯ್ತು.
ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದ. ಯಾವುದೋ ವೈಯಕ್ತಿಕ ವಿಚಾರಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂಬ ಶಂಕೆ ವ್ಯಕ್ತವಾಗಿದೆ. ಆತ ಒತ್ತಡಕ್ಕೆ ಒಳಗಾಗಿದ್ದ ಎಂದು ಸ್ನೇಹಿತರು ಹೇಳಿದ್ದಾರೆ. ಆದ್ರೆ ಕಾರಣ ಮಾತ್ರ ಇನ್ನೂ ಬಹಿರಂಗವಾಗಿಲ್ಲ.