ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರೆಂಬ ಕಾರಣಕ್ಕೆ ಮಡಿಕೇರಿಯಲ್ಲಿ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅವರ ವಿರುದ್ಧ ಪ್ರತಿಭಟನೆ ನಡೆಸಿ ಕಾರಿನ ಮೇಲೆ ಮೊಟ್ಟೆ ಎಸೆದಿದ್ದರು. ಇದಕ್ಕೆ ಕೆಂಡಾಮಂಡಲರಾಗಿದ್ದ ಸಿದ್ದರಾಮಯ್ಯ ಪೊಲೀಸ್ ವೈಫಲ್ಯವನ್ನು ಖಂಡಿಸಿ ಆಗಸ್ಟ್ 26 ಕ್ಕೆ ಮಡಿಕೇರಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಗುಡುಗಿದ್ದರು.
ಇದೀಗ ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಆಗಸ್ಟ್ 26ರಂದು ‘ನಮ್ಮ ನಡಿಗೆ ಮಡಿಕೇರಿ ಕಡೆಗೆ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಇದರ ಮೂಲಕ ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನ ನಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜ್ಯದ ವಿವಿಧ ಭಾಗಗಳಿಂದ ಸಹಸ್ರರ ಸಂಖ್ಯೆಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಅಂದು ಮಡಿಕೇರಿಗೆ ಆಗಮಿಸಲಿದ್ದಾರೆ ಎಂದು ಹೇಳಲಾಗಿದೆ.
ದಾವಣಗೆರೆಯಲ್ಲಿ ಸಿದ್ದರಾಮಯ್ಯನವರ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮ ಭರ್ಜರಿ ಯಶಸ್ವಿಯಾದ ನಂತರ ಈಗ ಮತ್ತೊಂದು ಸುತ್ತಿನ ಶಕ್ತಿ ಪ್ರದರ್ಶನಕ್ಕೆ ಮಡಿಕೇರಿ ವೇದಿಕೆಯಾಗಲಿದೆ ಎಂಬ ಮಾತುಗಳು ಪಕ್ಷದ ವಲಯದಲ್ಲೇ ಕೇಳಿ ಬರುತ್ತಿದೆ. ‘ನಮ್ಮ ನಡಿಗೆ ಮಡಿಕೇರಿ ಕಡೆಗೆ’ ಯಶಸ್ಸಿಗಾಗಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ, ಮಾಜಿ ಸಚಿವ ಹೆಚ್.ಸಿ. ಮಹಾದೇವಪ್ಪ ಮೊದಲಾದವರು ರೂಪುರೇಷೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.