ಬೆಂಗಳೂರು: ಶಾಲಾ ಮಕ್ಕಳಿಗೆ ಮೊಟ್ಟೆ ವಿತರಿಸುವ ರಾಜ್ಯ ಸರ್ಕಾರದ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದ ಬೆನ್ನಲ್ಲೇ ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಇದೀಗ ಬಾಳೆಹಣ್ಣಿನ ಜತೆ ಶೇಂಗಾ ಚಿಕ್ಕಿ ನೀಡಲು ನಿರ್ಧರಿಸಿದೆ.
ಕಲ್ಯಾಣ ಕರ್ನಾಟಕ ಭಾಗದ 1-8ನೇ ತರಗತಿ ಸರ್ಕಾರಿ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಮೊಟ್ಟೆ ವಿತರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿತ್ತು. ಶಾಲೆಯಲ್ಲಿ ಮೊಟ್ಟೆ ವಿತರಣೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಮೊಟ್ಟೆ ಸೇವಿಸದ ವಿದ್ಯಾರ್ಥಿಗಳ ಪಾಡೇನು ಎಂಬ ಪ್ರಶ್ನೆ ಉದ್ಭವವಾಗಿತ್ತು. ಮೊಟ್ಟೆ ಯೋಜನೆ ತೀವ್ರ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ವಿತರಿಸುವುದಾಗಿ ಸರ್ಕಾರ ತಿಳಿಸಿತ್ತು.
ಇದೀಗ ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ ನೀಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಬಹುಪೌಷ್ಠಿಕಾಂಶ ಕೊರತೆ ಹಾಗೂ ರಕ್ತಹೀನತೆಯಿಂದ ಬಳಲುತ್ತಿರುವ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ಪ್ರಾಥಮಿಕ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತಿದ್ದು, ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಿಸಬಹುದು ಎಂದು ಆಹಾರ ತಜ್ಞರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.