ಬೆಂಗಳೂರು: ವಿಧಾನ ಪರಿಷತ್ ಚುನಾವಣಾ ಅಖಾಡ ಇಂದಿನಿಂದ ರಂಗೇರಿದ್ದು, ಮೂರು ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಬಿಜೆಪಿ ಹಾಗೂ ಜೆಡಿಎಸ್ ಕೊನೇ ಕ್ಷಣದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಪರಿಷತ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೈಕಮಾಂಡ್ ರಾಜ್ಯ ನಾಯಕರ ಲೆಕ್ಕಾಚಾರ ತಲೆಕೆಳಗೆ ಮಾಡಿದ್ದು, ತನ್ನದೇ ತಂತ್ರಗಾರಿಕೆ ಮೂಲಕ ಟಿಕೆಟ್ ಘೋಷಿಸಿದೆ. ಮಾಜಿ ಡಿಸಿಎಂ, ಹಾಲಿ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರಿಗೆ ಮತ್ತೊಮ್ಮೆ ಬಿಜೆಪಿ ಪರಿಷತ್ ಟಿಕೆಟ್ ನೀಡಲಾಗಿದೆ. ಮಹಿಳಾ ಕೋಟಾದಡಿ ಸಾಮಾನ್ಯ ಕಾರ್ಯಕರ್ತೆ ಹೇಮಲತಾ ನಾಯಕ್, ದಲಿತ ಕೋಟಾದಲ್ಲಿ ಎಸ್ ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹಾಗೂ ಒಬಿಸಿ ಕೋಟಾದಡಿ ಕೇಶವ ಪ್ರಸಾದ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಕಾಂಗ್ರೆಸ್ ನಿಂದ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಹಾಗೂ ಕೆಪಿಸಿಸಿ ವಕ್ತಾರ ನಾಗರಾಜ್ ಯಾದವ್ ಅವರಿಗೆ ಟಿಕೆಟ್ ನೀಡಲಾಗಿದೆ.
ಜೆಡಿಎಸ್ ಕೂಡ ಕೊನೆ ಕ್ಷಣದಲ್ಲಿ ತನ್ನ ಅಭ್ಯರ್ಥಿ ಘೋಷಿಸಿದ್ದು, ಟಿ.ಎ. ಶರವಣ ಅವರಿಗೆ ಪರಿಷತ್ ಟಿಕೆಟ್ ನೀಡಿದೆ.
ಇಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.