ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲಿಯೂ ಶಾಲೆಗಳಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಪತ್ತೆಯಾಗುತ್ತಿರುವುದಕ್ಕೆ ಪಾಲಕರು ಹಾಗೂ ಸರ್ಕಾರ ತೀವ್ರ ಆತಂಕ ವ್ಯಕ್ತಪಡಿಸುವಂತಾಗುತ್ತಿದೆ.
ರಾಜ್ಯದಲ್ಲಿನ 1 ರಿಂದ 10ನೇ ತರಗತಿಯ 130 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಸಾರ್ವಜನಿಕ ಶಿಕ್ಷಣ ಆಯುಕ್ತರ ಕಚೇರಿಯು ಅಂಕಿ – ಸಂಖ್ಯೆ ಬಿಡುಗಡೆ ಮಾಡಿದೆ. ಇದರಿಂದಾಗಿ ಶಾಲೆಗೆ ಮಕ್ಕಳನ್ನು ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾತುಗಳು ಕೂಡ ಅಲ್ಲಲ್ಲಿ ಕೇಳಿ ಬರುತ್ತಿವೆ.
ಈಗಾಗಲೇ ಚಿಕ್ಕಮಗಳೂರಿನ ಜವಾಹರ ನವೋದಯ ವಸತಿ ಶಾಲೆಯಲ್ಲಿ 92 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೊಡುಗು ಜಿಲ್ಲೆಯ ಶಾಲೆಯೊಂದರಲ್ಲಿ 11 ವಿದ್ಯಾರ್ಥಿಗಳಲ್ಲಿ ಹಾಗೂ ಚಾಮರಾಜನಗರ ಜಿಲ್ಲೆಯ ಶಾಲೆಯಲ್ಲಿ 7 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳಲ್ಲಿ ಮಹಾಮಾರಿ ಕಾಣಿಸಿಕೊಂಡಿದೆ. ದಿನದಿಂದ ದಿನಕ್ಕೆ ಸೋಂಕಿತ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಲೇ ಇದೆಯೇ ಹೊರತು, ಕಡಿಮೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಡಿ. 9ರಂದು ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಸಚಿವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಸರ್ಕಾರವು ಶಾಲೆಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು, ಹೊಸ ಮಾರ್ಗಸೂಚಿಯನ್ನು ಕೂಡ ಇಂದು ಬಿಡುಗಡೆ ಮಾಡಿದೆ. ಆದರೆ, ಮುಂದೆ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುವುದನ್ನು ಮಾತ್ರ ಕಾಯ್ದು ನೋಡಬೇಕಿದೆ.