ಬೆಂಗಳೂರು: ರಾಜ್ಯ ಸೇರಿದಂತೆ ದೇಶದಲ್ಲಿ ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ಲಸಿಕೆ ಹಾಕಿಸಿಕೊಳ್ಳುವವರ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ. ಸದ್ಯ ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಮೊದಲ ಡೋಸ್ ಲಸಿಕೆಯನ್ನು ಸಂಪೂರ್ಣವಾಗಿ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ರಾಜ್ಯದ 9 ಜಿಲ್ಲೆಗಳಲ್ಲಿನ ಜನರು ಮೊದಲ ಡೋಸ್ ಲಸಿಕೆಯನ್ನು ಸಂಪೂರ್ಣವಾಗಿ ಪಡೆದಿದ್ದಾರೆ. ಈ ಕುರಿತು ಆರೋಗ್ಯ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ.
ರಾಜ್ಯದ ಧಾರವಾಡ, ಬೆಂಗಳೂರು ನಗರ, ವಿಜಯಪುರ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಗದಗ, ಬಾಗಲಕೋಟೆ ಹಾಗೂ ಬೀದರ್ ಜಿಲ್ಲೆಗಳಲ್ಲಿ ಶೇ. 100ರಷ್ಟು ಜನರು ಮೊದಲ ಡೋಸ್ ಪಡೆದಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ಶೇ. 97.5ರಷ್ಟು ಜನರು ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಆರೋಗ್ಯ ಕಾರ್ಯಕರ್ತರ ಶ್ರಮ ಹಾಗೂ ಜಿಲ್ಲಾಡಳಿತದ ನಿರಂತರ ಕಾರ್ಯದಿಂದ ಈ ಗುರಿ ಸಾಧಿಸಲಾಗಿದೆ ಎಂದು ಹೇಳಿದ್ದಾರೆ.
ಅಲ್ಲದೇ, ಬೆಳಗಾವಿ, ದಾವಣಗೆರೆ ಹಾಗೂ ಹಾಸನ ಜಿಲ್ಲೆಗಳಲ್ಲಿ ಶೇ.99ರಷ್ಟು ಜನರು ಮೊದಲ ಡೋಸ್ ಪಡೆದಿದ್ದಾರೆ. ಕೆಲವೇ ದಿನಗಳಲ್ಲಿ ರಾಜ್ಯದ ಜನರೆಲ್ಲ ಮೊದಲ ಡೋಸ್ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.