ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಭೇಟಿ ಬೆನ್ನಲ್ಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆಯೊಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಯತ್ನಾಳ್, ಡಿಸೆಂಬರ್ 10ರ ಬಳಿಕ ರಾಜ್ಯದಲ್ಲಿ ಬಹಳ ದೊಡ್ಡ ಬದಲಾವಣೆಯಾಗಲಿದೆ ಎಂದು ಹೇಳಿದ್ದು, ಇದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ಅಲ್ಲದೆ ಬಸನಗೌಡ ಪಾಟೀಲ್ ಯತ್ನಾಳ್, ಪೂರ್ಣ ಸಚಿವ ಸಂಪುಟವೇ ಪುನಾರಚನೆಯಾಗಬಹುದು ಎಂದು ಹೇಳುವ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದಾರೆ. ಜೊತೆಗೆ ಪರೋಕ್ಷವಾಗಿ ಕೆಲ ಸಚಿವರುಗಳ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್, ಅವರುಗಳು ವಿಧಾನಸೌಧಕ್ಕೆ ಬರುವುದಿಲ್ಲ. ಶಾಸಕರುಗಳ ಸಮಸ್ಯೆಗೂ ಸ್ಪಂದಿಸುವುದಿಲ್ಲ. ದಿನಬೆಳಗಾದರೆ ಮುಖ್ಯಮಂತ್ರಿಗಳ ಬಾಲಂಗೋಚಿಯಂತೆ ತಿರುಗಾಡುತ್ತಾರೆ ಎಂದು ಆರೋಪಿಸಿದ್ದಾರೆ.
ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಅವರ ವಿರುದ್ಧ ಯತ್ನಾಳ್ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದರು. ಅಲ್ಲದೆ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವುದು ಖಚಿತ ಎಂದು ಭವಿಷ್ಯ ನುಡಿದಿದ್ದರು. ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದಂತೆ ಯಡಿಯೂರಪ್ಪನವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.