ಬೆಂಗಳೂರು: ರಾತ್ರಿ 12 ಗಂಟೆ ಸುಮಾರಿಗೆ ಕಾಂಗ್ರೆಸ್ ಮುಖಂಡ, ಉದ್ಯಮಿ ಕೆಜಿಎಫ್ ಬಾಬು ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಳಿಯನ್ನು ಅಂತ್ಯಗೊಳಿಸಿದ್ದಾರೆ.
ಬೆಳಗ್ಗೆ 6.30 ರಿಂದ ರಾತ್ರಿ 12 ಗಂಟೆಯವರೆಗೆ ಅಧಿಕಾರಿಗಳು ಕೆಜಿಎಫ್ ಬಾಬು ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ದಾಳಿಯ ಸಂದರ್ಭದಲ್ಲಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಹಣ ವರ್ಗಾವಣೆ ಬಗ್ಗೆ ದಾಖಲೆ ವಶಕ್ಕೆ ಪಡೆದ ಅಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಉದ್ಯಮಿ ಯುಸೂಫ್ ಶರೀಫ್ ಅಲಿಯಾಸ್ ಗುಜರಿ ಬಾಬು 1700 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದರು. ಬೆಂಗಳೂರಿನ ವಸಂತನಗರದಲ್ಲಿರುವ ಬಾಬು ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಸ್ಥಿರಾಸ್ತಿ, ಚರಾಸ್ತಿ ದಾಖಲೆಗಳು, ಬ್ಯಾಂಕ್ ಖಾತೆಗಳ ಮಾಹಿತಿ ಪರಿಶೀಲಿಸಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.