ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಭಾರತ್ ಜೋಡೋ’ ಯಾತ್ರೆಯನ್ನು ಕೈಗೊಂಡಿದ್ದು, ಪ್ರಸ್ತುತ ಈ ಯಾತ್ರೆ ಕಳೆದ 12 ದಿನಗಳಿಂದ ಕರ್ನಾಟಕದಲ್ಲಿ ನಡೆಯುತ್ತಿದೆ. ರಾಹುಲ್ ಗಾಂಧಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆಗೆ ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಬೆಂಬಲ ಸೂಚಿಸಿ ಅವರೊಂದಿಗೆ ಹೆಜ್ಜೆ ಹಾಕುತ್ತಿದ್ದಾರೆ.
ಇದರ ಮಧ್ಯೆ ರಾಹುಲ್ ಗಾಂಧಿ ಅವರ ತಾಯಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೂ ಸಹ ಆಗಮಿಸಿ ಬೆಂಬಲ ಸೂಚಿಸಿದ್ದು, ಮಗನೊಂದಿಗೆ ಹೆಜ್ಜೆ ಹಾಕಿದ್ದಾರೆ. ಈ ಸಂದರ್ಭದಲ್ಲಿ ಸೋನಿಯಾ ಗಾಂಧಿಯವರ ಶೂ ಲೇಸ್ ಕಳಚಿದ್ದು, ಇದನ್ನು ಮಗ ರಾಹುಲ್ ಗಾಂಧಿ ಕಟ್ಟುತ್ತಿರುವ ಫೋಟೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು.
ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವುದರ ಮಧ್ಯೆ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಈಶ್ವರಪ್ಪ ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿಯವರ ಶೂ ಲೇಸ್ ಬಿಚ್ಚಿದಾಗ ರಾಹುಲ್ ಗಾಂಧಿ ಕೆಳಗೆ ಕುಳಿತು ಲೇಸ್ ಕಟ್ಟಿರೋದು ನನಗೆ ಮೆಚ್ಚುಗೆ ಆಗಿದೆ ಎಂದು ಶ್ಲಾಘಿಸಿದ್ದಾರೆ.
ಇದೇ ಸಂದರ್ಭದಲ್ಲಿ ‘ಭಾರತ್ ಜೋಡೋ’ ಯಾತ್ರೆ ಕುರಿತು ಪ್ರತಿಕ್ರಿಸಿದ ಅವರು, ರಾಹುಲ್ ಗಾಂಧಿ ನಡೆಸುತ್ತಿರುವ ಈ ಯಾತ್ರೆಯಿಂದ ಕಾಂಗ್ರೆಸ್ಸಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.