ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಅಲ್ಲದೆ ಮತದಾರರ ಮನವೊಲಿಕೆಗಾಗಿ ಹಲವು ಆಶ್ವಾಸನೆಗಳನ್ನು ನೀಡುತ್ತಿದ್ದು, ಜೊತೆಗೆ ಚುನಾವಣಾ ಪ್ರಣಾಳಿಕೆಯಲ್ಲೂ ಭರಪೂರ ಭರವಸೆ ಸಿಗಲಿದೆ.
ಇದರ ಮಧ್ಯೆ ಬೆಳಗಾವಿಯಲ್ಲಿ ಮಾತನಾಡಿರುವ ರಾಜ್ಯ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರಾಜ್ಯದ ರೈತರ ಪ್ರಣಾಳಿಕೆಗಳಿಗೆ ಒಪ್ಪಿಗೆ ಸೂಚಿಸಿ ಅದನ್ನು ಅನುಷ್ಠಾನಕ್ಕೆ ತರುವ ಭರವಸೆ ನೀಡುವ ಯಾವುದೇ ಪಕ್ಷಕ್ಕೆ ಬೆಂಬಲ ನೀಡಲು ಬಹಿರಂಗವಾಗಿ ಕರೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಗ್ರಾಮೀಣ ಯುವಕರ ವಲಸೆ ತಪ್ಪಿಸುವ ಸಲುವಾಗಿ ಕೃಷಿಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳಬೇಕು. ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ರೈತನ ಮಗನನ್ನು ಮದುವೆಯಾಗುವ ಹೆಣ್ಣು ಮಗಳಿಗೆ ಸರ್ಕಾರಿ ಕೆಲಸದಲ್ಲಿ ಮೀಸಲಾತಿ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಅವರು ಒತ್ತಾಯಿಸಿದ್ದಾರೆ.