ನವದೆಹಲಿ: ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಹೈಕಮಾಂಡ್ ಬಳಿ ಚರ್ಚೆಗೆ ನಿರ್ಧರಿಸಿದ್ದಾರೆ.
ಈ ಕುರಿತು ದೆಹಲಿಯಲ್ಲಿ ಮಾತನಾಡಿದ ಸಿಎಂ, ನಾನು ವಿವಿಧ ಯೋಜನೆಗಳ ಬಗ್ಗೆ ಕೇಂದ್ರ ಸಚಿವರ ಜತೆ ಚರ್ಚಿಸಲು ದೆಹಲಿಗೆ ಬಂದಿದ್ದೆ. ಈ ವೇಳೆ ಜೆ.ಪಿ ನಡ್ಡಾ ಹಾಗೂ ಅಮಿತ್ ಶಾ ಅವರ ಭೇಟಿಗೂ ನಿರ್ಧರಿಸಿದ್ದೇನೆ. ವರಿಷ್ಠರು ನನ್ನನ್ನು ಕರೆದಿಲ್ಲ. ನಾನಾಗಿಯೇ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಬೇಂದಿದ್ದೇನೆ. ಆದರೆ ವರಿಷ್ಠರ ಭೇಟಿಗೆ ಸಮಯ ನಿಗದಿಯಾಗಿಲ್ಲ ಎಂದರು.
ಸಂಪುಟ ವಿಸ್ತರಣೆಗೆ ದೆಹಲಿಯಲ್ಲಿ ಗರಿಗೆದರಿದ ಚಟುವಟಿಕೆ
ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಯೋ ಅಥವಾ ವಿಸ್ತರಣೆಯೋ ಎಂಬುದು ಹೈಕಮಾಂಡ್ ಭೇಟಿ ಬಳಿಕವೇ ಗೊತ್ತಾಗಲಿದೆ ಎಂದು ಹೇಳಿದರು.
ಇದೇ ವೇಳೆ ಹಲಾಲ್ ಹಾಗೂ ಹಿಜಾವ್ ವಿವಾದ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಸಿಎಂ, ಧಾರ್ಮಿಕ ಮತ್ತು ಸಾಮಾಜಿಕ ಆಚರಣೆಗಳು ನಮ್ಮ ಸಮಾಜದಲ್ಲಿ ಯಾವ ರೀತಿ ಇರಬೇಕು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಕಾನೂನು ಎಲ್ಲರಿಗೂ ಒಂದೇ. ಎಲ್ಲರೂ ಅದಕ್ಕೆ ತಲೆಬಾಗಿ ನಡೆಯಬೇಕು. ಶಾಂತಿ-ಸುವ್ಯವಸ್ಥೆ ಕಾಪಾಡುವುದೇ ಸರ್ಕಾರದ ಆದ್ಯತೆ ಎಂದು ಹೇಳಿದರು.