ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಕ್ರಿಕೆಟ್ ಸರಣಿಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಜುಲೈ 12 ರಂದು ಪ್ರಾರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ 16 ಸದಸ್ಯರ ತಂಡವನ್ನು ಬಿಸಿಸಿಐ ಅಂತಿಮಗೊಳಿಸಿದೆ. ತಂಡದ ನಾಯಕತ್ವವನ್ನು ಆರಂಭಿಕ ಆಟಗಾರ ರೋಹಿತ್ ಶರ್ಮಾಗೆ ಹಸ್ತಾಂತರಿಸಲಾಗಿದ್ದು, ಉಪನಾಯಕ ಪಟ್ಟವನ್ನು ಅನುಭವಿ ಆಟಗಾರ ಅಜಿಂಕ್ಯ ರಹಾನೆಗೆ ನೀಡಲಾಗಿದೆ.
ಇತ್ತೀಚೆಗಷ್ಟೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರಹಾನೆಗೆ ಟೆಸ್ಟ್ ತಂಡದ ಉಪನಾಯಕನ ಪಟ್ಟ ಲಭಿಸಿದೆ. ಟೆಸ್ಟ್ ಹಾಗೂ ಏಕದಿನ ಎರಡೂ ಮಾದರಿಗಳಲ್ಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ. ಅವರೊಂದಿಗೆ ಟೆಸ್ಟ್‌ನಲ್ಲಿ ಕೆಎಸ್ ಭರತ್ ಮತ್ತು ಏಕದಿನದಲ್ಲಿ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಜವಾಬ್ದಾರಿಯನ್ನು ಪಡೆದಿದ್ದಾರೆ.
ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಅವರನ್ನು ತಂಡದಿಂದ ಹೊರಗಿಡಲಾಗಿದೆ. WTC ಫೈನಲ್‌ನಲ್ಲಿ ಪೂಜಾರ ಕಳಪೆ ಪ್ರದರ್ಶನ ನೀಡಿದ್ದರು. ಯಶಸ್ವಿ ಜೈಸ್ವಾಲ್, ರಿತುರಾಜ್ ಗಾಯಕ್ವಾಡ್ ಅವರಂತಹ ಯುವ ಆಟಗಾರರಿಗೆ ಬಿಸಿಸಿಐ ಅವಕಾಶ ನೀಡಿದೆ.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್ ಮತ್ತು ನವದೀಪ್ ಸೈನಿ.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಮತ್ತು ಮುಖೇಶ್ ಕುಮಾರ್.