ಪ್ರಕರಣ ಒಂದರ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ವಿಚ್ಛೇದನ ಪಡೆದ ಬಳಿಕವೂ ಮಹಿಳೆ ಕೌಟುಂಬಿಕ ದೌರ್ಜನ್ಯ ಕಾಯ್ದೆ ಅಡಿ ಜೀವನಾಂಶ ಪಡೆಯಲು ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿದೆ.
ಪ್ರಕರಣದ ವಿವರ: ಮೇ 2013ರಲ್ಲಿ ವಿವಾಹವಾಗಿದ್ದ ದಂಪತಿ ಕೌಟುಂಬಿಕ ವಿವಾದದ ಕಾರಣಕ್ಕೆ ಜುಲೈ 2013ರಲ್ಲಿ ಪ್ರತ್ಯೇಕಗೊಂಡಿದ್ದು, ಬಳಿಕ ವಿಚ್ಛೇದನ ಪಡೆದುಕೊಂಡಿದ್ದರು. ಇದಾದ ನಂತರ ಮಹಿಳೆ ಕೌಟುಂಬಿಕ ದೌರ್ಜನ್ಯ ಕಾಯ್ದೆ ಅಡಿ ನಿರ್ವಹಣಾ ಭತ್ಯೆ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಆದರೆ ವಿಚ್ಛೇದನ ನೀಡುವ ಸಂದರ್ಭದಲ್ಲಿ ಎಲ್ಲ ಬಾಕಿಯನ್ನು ಇತ್ಯರ್ಥಪಡಿಸಲಾಗಿದೆ ಎಂಬ ಕಾರಣಕ್ಕೆ ಕೌಟುಂಬಿಕ ನ್ಯಾಯಾಲಯ ಈ ಅರ್ಜಿಯನ್ನು ತಳ್ಳಿಹಾಕಿತ್ತು. ಇದನ್ನು ಪ್ರಶ್ನಿಸಿ ಆಕೆ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು 6,000 ರೂಪಾಯಿ ಜೀವನಾಂಶ ನೀಡುವಂತೆ ಆದೇಶಿಸಲಾಗಿತ್ತು.
ಇದನ್ನು ಪ್ರಶ್ನಿಸಿ ಮಹಿಳೆಯ ಮಾಜಿ ಪತಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದು, ವಿಚ್ಛೇದನ ಸಂದರ್ಭದಲ್ಲಿ ಎಲ್ಲ ಬಾಕಿಯನ್ನು ಇತ್ಯರ್ಥಪಡಿಸಲಾಗಿದೆ ಎಂದು ವಾದ ಮಂಡಿಸಿದ್ದರು. ಆದರೆ ಸೆಷನ್ಸ್ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಎತ್ತಿ ಹಿಡಿದಿದೆ.