ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಕೌಶಲ್ಯ ಹೆಚ್ಚಿಸುವ ನಿಟ್ಟಿನಲ್ಲಿ ಐಟಿ, ಬಿಟಿ ಮತ್ತು ಕೌಶಲ್ಯ ಇಲಾಖೆಯಿಂದ ‘ಕೋಡ್ ಉನ್ನತಿ’ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕದಲ್ಲಿ ಯುವ ಜನ ಸಬಲೀಕರಣ ಹಾಗೂ ಮಹಿಳಾ ಉದ್ಯಮಶೀಲತೆ ಸಾಧಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಗೆ ಇಂದು ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಚಾಲನೆ ನೀಡಿದ್ದಾರೆ.
ಈ ಯೋಜನೆಯ ಮೂಲಕ 20 ಸಾವಿರ ವಿದ್ಯಾರ್ಥಿಗಳಿಗೆ 200 ಗಂಟೆಗಳ ಅವಧಿಯಲ್ಲಿ ಡಿಜಿಟಲ್ ಕೌಶಲ್ಯ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 50 ಸರ್ಕಾರಿ ಪದವಿ ಪೂರ್ವ ಕಾಲೇಜು, ಐಟಿಐ, ಪಾಲಿಟೆಕ್ನಿಕ್, ಕಲಾ ಹಾಗೂ ವಿಜ್ಞಾನ ಕಾಲೇಜುಗಳನ್ನು ಗುರುತಿಸಲಾಗಿದೆ.
ಈ ಯೋಜನೆಯನ್ನು ಆರಂಭದಲ್ಲಿ ರಾಯಚೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ಪ್ರಾರಂಭಿಸಲಾಗುತ್ತಿದೆ. ಆ ನಂತರ ಬೇರೆ ಬೇರೆ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು.
ಇದರೊಂದಿಗೆ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.