ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಿಗದಿಪಡಿಸಿದ ಗಡುವಿನೊಳಗೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸದೆ ವಿದ್ಯಾರ್ಥಿಗಳ ಒಂದು ವರ್ಷದ ಕಲಿಕೆ ನಷ್ಟ ಉಂಟು ಮಾಡಿದ ಬೆಂಗಳೂರಿನ ನರ್ಸಿಂಗ್ ಕಾಲೇಜ್ ಒಂದಕ್ಕೆ 10 ಲಕ್ಷ ರೂಪಾಯಿ ದಂಡ ವಿಧಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಬೆಳ್ಳಂದೂರು ಅಗ್ರಹಾರದ ಮದರ್ ಮೇರಿ ಕಾಲೇಜ್ ಆಫ್ ನರ್ಸಿಂಗ್ ಗೆ ದಂಡ ವಿಧಿಸಲಾಗಿದ್ದು, ಒಂದು ವರ್ಷದ ಕಲಿಕೆ ನಷ್ಟ ಅನುಭವಿಸಿದ ಹತ್ತು ಮಂದಿ ವಿದ್ಯಾರ್ಥಿಗಳಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ಪಾವತಿಸಬೇಕು ಎಂದು ತಿಳಿಸಲಾಗಿದೆ. ಅಲ್ಲದೆ ನಿಯಮ ಪಾಲಿಸದ ಹಿನ್ನೆಲೆಯಲ್ಲಿ ಕಾಲೇಜಿನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಲಾಗಿದೆ.
2021-22 ನೇ ಸಾಲಿನ ಮೊದಲ ವರ್ಷದ ಬಿಎಸ್ಸಿ ನರ್ಸಿಂಗ್ ಕೋರ್ಸ್ ಗೆ ಈ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಆದರೆ ಕಾಲೇಜು ಆಡಳಿತ ಮಂಡಳಿ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ವಿದ್ಯಾರ್ಥಿಗಳು, ವಿಶ್ವವಿದ್ಯಾಲಯಕ್ಕೆ ಪೋರ್ಟಲ್ ಓಪನ್ ಮಾಡಲು ಹಾಗೂ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲು ನಿರ್ದೇಶಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.