ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆಗಾಗಿ ಬಿಜೆಪಿಯಲ್ಲಿ ಮುಂದುವರೆದ ಕಸರತ್ತು…! ವರಿಷ್ಠರ ಭೇಟಿಗೂ ರಾಜ್ಯ ನಾಯಕರ ಹಿಂದೇಟು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಪರಾಭಗೊಂಡಿರುವ ಬಿಜೆಪಿ ಕೇವಲ 66 ಸ್ಥಾನಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಇನ್ನು ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 8 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜ್ಯ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಬಹುತೇಕ ಶಾಸಕರುಗಳು ಎರಡು ದಿನಗಳ ಕಾಲ ನಡೆದ ಅಧಿವೇಶನದಲ್ಲಿ ಈಗಾಗಲೇ ಪ್ರಮಾಣವಚನ ಸ್ವೀಕರಿಸಿದ್ದು, ಇದೀಗ ಸಂಪುಟಕ್ಕೆ ಮತ್ತಷ್ಟು ಸಚಿವರನ್ನು ಸೇರ್ಪಡೆ ಮಾಡಿಕೊಳ್ಳುವ ಸಲುವಾಗಿ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಕ್ಷದ ಹೈಕಮಾಂಡ್ ನಾಯಕರ ಜೊತೆ ಚರ್ಚಿಸಲು ದೆಹಲಿಗೆ ತೆರಳಲು ಮುಂದಾಗಿದ್ದಾರೆ.

ಅತ್ತ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆಗಾಗಿ ಕಸರತ್ತು ನಡೆದಿದ್ದು, ಆದರೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಈ ನಿಟ್ಟಿನಲ್ಲಿ ಚರ್ಚೆ ನಡೆಸಲು ಪಕ್ಷದ ಕೇಂದ್ರ ವರಿಷ್ಠರ ಬಳಿ ತೆರಳಲು ರಾಜ್ಯ ನಾಯಕರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆಯ್ಕೆ ಇನ್ನೂ ಸಹ ಕಗ್ಗಂಟಾಗಿಯೇ ಉಳಿದಿದೆ.

ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರನ್ನೇ ವಿಧಾನಸಭೆಯ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡುವ ಮೂಲಕ ಲಿಂಗಾಯತ ಸಮುದಾಯದ ವಿಶ್ವಾಸ ಗಳಿಸುವ ಲೆಕ್ಕಾಚಾರವೂ ನಡೆದಿದ್ದು, ಇದರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರನ್ನು ಸಹ ಬದಲಿಸುವ ಚಿಂತನೆ ನಡೆದಿದೆ. ಒಟ್ಟಿನಲ್ಲಿ ವಿಪಕ್ಷ ನಾಯಕನ ಆಯ್ಕೆ ವಿಚಾರ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read