ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಸಾಧಿಸಿದ್ದು, ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಪೂರ್ಣ ಪ್ರಮಾಣದ ತಮ್ಮ ಸಚಿವ ಸಂಪುಟವನ್ನು ರಚಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಅವರಿಗೂ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಸಿಗಬಹುದು ಎಂದು ಹೇಳಲಾಗಿತ್ತಾದರೂ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸ್ಥಾನ ನೀಡಲಾಗಿಲ್ಲ.
ಇನ್ನು ಈ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಜಗದೀಶ್ ಶೆಟ್ಟರ್ ಭಾನುವಾರದಂದು ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಲಕ್ಷ್ಮಣ ಸವದಿ ಹಾಗೂ ನನಗೆ ಸಚಿವ ಸ್ಥಾನ ನೀಡಬೇಕೆನ್ನುವುದು ಜನರ ಅಭಿಲಾಷೆಯಾಗಿದೆ. ಮುಂದಿನ ದಿನಗಳಲ್ಲಿ ಒಳ್ಳೆಯ ಸ್ಥಾನಮಾನ ಸಿಗುವ ಭರವಸೆ ಇದೆ ಎಂದು ಹೇಳಿದ್ದಾರೆ.
ಇನ್ನು ಬಿಜೆಪಿ ಕುರಿತಂತೆ ಮಾತನಾಡಿದ ಅವರು, ಪಕ್ಷ ಕಟ್ಟಿದ ಮುಖಂಡರೆಲ್ಲ ಈಗ ಹೊರಗೆ ಹೋಗಿದ್ದಾರೆ. ಈಗ ಅಲ್ಲಿ ಸಮರ್ಥ ನಾಯಕತ್ವವೇ ಇಲ್ಲದಂತಾಗಿದ್ದು, ಫಲಿತಾಂಶ ಪ್ರಕಟಗೊಂಡು ಇಷ್ಟು ದಿನಗಳಾದರೂ ಸಹ ಶಾಸಕಾಂಗ ಪಕ್ಷದ ಸಭೆ ಕರೆದು ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎಂದು ವ್ಯಂಗ್ಯವಾಡಿದ್ದಾರೆ.