ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದಾರೆ.
ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದ್ದು, ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಮನಗರದ ರೇಷ್ಮೆ ಶಾಲನ್ನು ಸಿದ್ದರಾಮಯ್ಯನವರಿಗೆ ಹೊದಿಸುವುದರ ಮೂಲಕ 75ನೇ ವರ್ಷದ ಹುಟ್ಟುಹಬ್ಬದ ಶುಭ ಕೋರಿದ್ದಾರೆ.
ಬಳಿಕ ಉಭಯ ನಾಯಕರು ಪರಸ್ಪರ ಅಪ್ಪಿಕೊಂಡಿದ್ದು, ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಯನ್ನು ನಾವೆಲ್ಲರೂ ಒಟ್ಟಾಗಿ ಎದುರಿಸುತ್ತೇವೆ ಎಂಬ ಸಂದೇಶ ಸಾರಿದ್ದಾರೆ. ಈ ವೇಳೆ ವೇದಿಕೆ ಮೇಲಿದ್ದ ಗಣ್ಯರು ಚಪ್ಪಾಳೆ ತಟ್ಟಿದ್ದು, ಲಕ್ಷಾಂತರ ಕಾರ್ಯಕರ್ತರು ಜಯಘೋಷ ಮೊಳಗಿಸಿದ್ದಾರೆ.