ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಯನ್ನು ವೈಯಕ್ತಿಕ ಹಿತಾಸಕ್ತಿಗಾಗಿ ಸಲ್ಲಿಸಿರುವುದು ಮೇಲ್ನೋಟಕ್ಕೆ ಸಾಬೀತಾದರೆ ಇನ್ನು ಮುಂದೆ ಅಂತವರಿಗೆ ಕನಿಷ್ಠ 50 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಶುಕ್ರವಾರದಂದು ಪ್ರಕರಣವೊಂದರ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯಪೀಠ ಈ ಎಚ್ಚರಿಕೆ ನೀಡಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರರೊಬ್ಬರ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗಿ ನಮ್ಮ ಮನವಿ ಈಡೇರಿದೆ ಹಾಗಾಗಿ ಅರ್ಜಿಯನ್ನು ಹಿಂಪಡೆಯುತ್ತಿರುವುದಾಗಿ ತಿಳಿಸಿದ್ದರು. ಇದಕ್ಕೆ ಆಕ್ಷೇಪಿಸಿದ ನ್ಯಾಯಪೀಠ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ನ್ಯಾಯಾಲಯದ ಮುಂದೆ ಒಮ್ಮೆ ಸಲ್ಲಿಕೆಯಾದರೆ ಅಂತಹ ಅರ್ಜಿಯನ್ನು ಹಿಂಪಡೆಯುವ ಅವಕಾಶವಿಲ್ಲ ಎಂದಿದೆ.
ಅಲ್ಲದೆ, ಸಾರ್ವಜನಿಕ ಮಹತ್ವದ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತಂದ ವೇಳೆ ಅದು ಕೋರ್ಟ್ ವ್ಯಾಪ್ತಿಗೆ ಒಳಪಟ್ಟ ವಿಷಯವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಅರ್ಜಿ ಹಿಂಪಡೆಯುವುದು ಸೂಕ್ತವಲ್ಲ ಎಂದು ಹೇಳಿದ ನ್ಯಾಯಾಲಯ ಅರ್ಜಿದಾರರಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ. ಇನ್ನು ಮುಂದೆ ವೈಯಕ್ತಿಕ ಹಿತಾಸಕ್ತಿಯಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ಮೇಲ್ನೋಟಕ್ಕೆ ಕಂಡು ಬಂದರೆ ಅಂತಹ ಅರ್ಜಿದಾರರಿಗೆ ಕನಿಷ್ಠ 50 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.