ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯಲಿದ್ದು, ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಕಾಂಗ್ರೆಸ್ ಸುವರ್ಣಸೌಧ ಚಲೋ ಪಾದಯಾತ್ರೆ ಹಮ್ಮಿಕೊಂಡಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಹಾಗೂ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಖಾನಪುರದಿಂದ ಸುವರ್ಣ ವಿಧಾನಸೌಧಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಅಂಜಲಿ ನಿಂಬಾಳ್ಕರ್ ಮಾಹಿತಿ ನೀಡಿದ್ದು, ಎರಡು ಬಾರಿ ಪ್ರವಾಹದಿಂದ ಕ್ಷೇತ್ರದಲ್ಲಿ ಸಾಕಷ್ಟು ಸಂಕಷ್ಟಗಳು ಎದುರಾಗಿವೆ. ರಸ್ತೆ, ಸೇತುವೆ ದುರಸ್ತಿ ಕೆಲಸವಾಗಬೇಕಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕಿದೆ. ಅತಿವೃಷ್ಟಿಯಿಂದ ಬೆಳೆ ಹಾನಿಯಾದವರಿಗೆ ಪರಿಹಾರ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸತೀಶ್ ಜಾರಕಿಹೊಳಿ, ಖಾನಾಪುರದ ಜನತೆ ಜತೆಗೂಡಿ ಪಾದಯಾತ್ರೆ ಹಮ್ಮಿಕೊಳ್ಳುತ್ತಿರುವುದಾಗಿ ತಿಳಿಸಿದರು.