ಶಿವಮೊಗ್ಗ: ಜಿಲ್ಲಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಸಾಗರ, ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿರುವುದರಿಂದ ತುಂಗಾ, ಶರಾವತಿ, ವರದಾ ಮೊದಲಾದ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.
ನಿರಂತರ ಮಳೆಯಿಂದಾಗಿ ಕೆರೆ ಕಟ್ಟೆಗಳು, ಹಳ್ಳಕೊಳ್ಳಗಳಲ್ಲಿ ನೀರು ಹೆಚ್ಚಾಗಿದೆ. ಇಂದು ಸಹ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಾಗರ, ತೀರ್ಥಹಳ್ಳಿ, ಹೊಸನಗರ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ತುಂಗಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಾಶಯಕ್ಕೆ 48209 ಕ್ಯೂಸೆಕ್ ಒಳಹರಿವಿದ್ದು, 54065 ಕ್ಯೂಸೆಕ್ ಹೊರಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 588.24 ಅಡಿ ಇದ್ದು, ಇಂದಿನ ಮಟ್ಟ 586.51 ಅಡಿಯಷ್ಟು ಇದೆ. ತುಂಗಾ ನದಿಯಿಂದ ಭಾರೀ ಪ್ರಮಾಣದ ನೀರನ್ನು ಹೊರ ಬಿಡುತ್ತಿರುವುದರಿಂದ ನಗರ ವ್ಯಾಪ್ತಿಯಲ್ಲಿ ಹರಿಯುವ ತುಂಗಾ ನದಿ ಅಪಾಯಮಟ್ಟಕ್ಕೇರಿದೆ. ಕೋರ್ಪಲಯ್ಯನ ಛತ್ರದ ಬಳಿ ಇರುವ ತುಂಗಾ ನದಿಯ ಕಲ್ಲಿನ ಮಂಟಪ ಮುಳುಗಲು ಅರ್ಧ ಅಡಿಯಷ್ಟು ಬಾಕಿ ಇದೆ.
ಭದ್ರಾ ಜಲಾಶಯಕ್ಕೆ 299042 ಕ್ಯೂಸೆಕ್ ಒಳಹರಿವಿದ್ದು, 143 ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ಜಲಾಶಯದ ಗರಿಷ್ಠ ಮಟ್ಟ 186 ಅಡಿ ಇದ್ದು, 166.4 ಅಡಿಯಷ್ಟು ನೀರಿದೆ.
ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. 56645 ಕ್ಯೂಸೆಕ್ ನಷ್ಟು ನೀರು ಹರಿದು ಬರುತ್ತಿದ್ದು, 283.80 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದ ಗರಿಷ್ಠಮಟ್ಟ 1819 ಅಡಿ ಇದ್ದು, ಇಂದಿನ ನೀರಿನ ಮಟ್ಟ 1772.60 ಅಡಿಯಷ್ಟಿದೆ.