ರಾಜ್ಯ ರಾಜಕಾರಣದಲ್ಲಿ ಶಿವಮೊಗ್ಗ ಜಿಲ್ಲೆಯದ್ದು ದೊಡ್ಡ ಹೆಸರು. ಇದೇ ಜಿಲ್ಲೆಯ ಐವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು ಎಂಬುದು ಒಂದು ಹೆಗ್ಗಳಿಕೆ.
ಆದರೆ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ರಾಜಕೀಯ ಘಟಾನುಘಟಿ ನಾಯಕರಿಲ್ಲದೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಜಿಲ್ಲೆಯ ಹಿರಿಯ ನಾಯಕರಾದ ಬಿ.ಎಸ್. ಯಡಿಯೂರಪ್ಪ, ಕಾಗೋಡು ತಿಮ್ಮಪ್ಪ, ಕೆ.ಎಸ್. ಈಶ್ವರಪ್ಪ ಈ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಬಹು ಬದಲಾವಣೆಗಳೊಂದಿಗೆ ಹೊಸ ಮುಖಗಳು ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಕಣದಲ್ಲಿದ್ದಾರೆ.
ಯಡಿಯೂರಪ್ಪನವರು ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರದಲ್ಲಿ ಅವರ ಪುತ್ರ ಬಿ.ವೈ. ವಿಜಯೇಂದ್ರ ಅಭ್ಯರ್ಥಿಯಾಗಿದ್ದರೆ, ಕಾಗೋಡು ತಿಮ್ಮಪ್ಪನವರ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದಾರೆ. ಇನ್ನು ಈಶ್ವರಪ್ಪನವರು ಪ್ರತಿನಿಧಿಸುತ್ತಿರುವ ಶಿವಮೊಗ್ಗ ಕ್ಷೇತ್ರದಲ್ಲಿ ಹೊಸ ಮುಖ ಚನ್ನಬಸಪ್ಪನವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.