ಕರ್ನಾಟಕದಲ್ಲಿ ಬಿಜೆಪಿ ಸೋಲುವುದು ಖಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ವಾಮಮಾರ್ಗ ಹಿಡಿಯಲು ಮುಂದಾಗಿರುವ ಕೇಂದ್ರ ಸರ್ಕಾರ, ಕರ್ನಾಟಕದ ಕಾಂಗ್ರೆಸ್ ಮುಖಂಡರ ಮೇಲೆ ಐಟಿ – ಇಡಿ ನಡೆಸಲು ಸಿದ್ಧತೆ ನಡೆಸಿದೆ ಎಂದು ‘ಕೈ’ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.
ಮಂಗಳವಾರದಂದು ನವದೆಹಲಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಳಿ ನಡೆಸುವ ಉದ್ದೇಶದಿಂದಲೇ 1500ಕ್ಕೂ ಅಧಿಕಾರಿಗಳನ್ನು ದೆಹಲಿಯಿಂದ ಕರ್ನಾಟಕಕ್ಕೆ ಕಳುಹಿಸಲಾಗುತ್ತಿದೆ ಎಂದು ಹೇಳಿದರು.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತವಾಗಿದೆ. ಬಹುತೇಕ ಸಮೀಕ್ಷೆಗಳು ಸಹ ಇದನ್ನೇ ಹೇಳಿದ್ದು, ಹೀಗಾಗಿ ಹತಾಶಗೊಂಡಿರುವ ಬಿಜೆಪಿ ನಾಯಕರು ವಾಮಮಾರ್ಗದ ಮೂಲಕ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಅಧಿಕಾರಿಗಳೂ ಇದಕ್ಕೆ ಸಾಥ್ ನೀಡುತ್ತಿದ್ದು, ಪ್ರಚಾರ ಕಾರ್ಯಕ್ಕೆ ಹೋಗದಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದರು.