ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಡಿಸೆಂಬರ್ 3ರ ವರೆಗೆ ಲಕ್ಷ ದೀಪೋತ್ಸವ ನಡೆಯಲಿದ್ದು, ಇದರ ಜೊತೆಗೆ ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ ಸಹ ಆಯೋಜಿಸಲಾಗಿದೆ. ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಸಾನಿಧ್ಯದಲ್ಲಿ ಈ ಕಾರ್ಯಕ್ರಮಗಳು ನಡೆಯಲಿವೆ.
ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಸ್ವತಃ ಶ್ರೀ ಮಂಜುನಾಥ ಸ್ವಾಮಿಯೇ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುವುದು ವಿಶೇಷ. ಅಲ್ಲದೆ 5 ಕಟ್ಟೆಗಳಿಗೆ ದೇವರು ಭೇಟಿ ನೀಡುತ್ತಾರೆ. ಇದನ್ನು ಕಣ್ತುಂಬಿಕೊಂಡು ಭಕ್ತರು ಪುನೀತರಾಗುತ್ತಾರೆ.
ಡಿಸೆಂಬರ್ 2ರಂದು ಸರ್ವಧರ್ಮ ಸಮ್ಮೇಳನ ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದಾರೆ. ಡಿಸೆಂಬರ್ 3 ರಂದು ನಡೆಯಲಿರುವ ಸಾಹಿತ್ಯ ಸಮ್ಮೇಳನವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಉದ್ಘಾಟಿಸಲಿದ್ದಾರೆ.
ಅಲ್ಲದೆ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಭಕ್ತಾದಿಗಳು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವ ಮೂಲಕ ಪಾಲ್ಗೊಳ್ಳಲು ಕೋರಲಾಗಿದೆ.