ಸರ್ಕಾರಿ ಆಸ್ಪತ್ರೆಗಳು ಅವ್ಯವಸ್ಥೆಗಳ ಅಗರ ಎಂದೇ ಹೇಳಲಾಗುತ್ತದೆ. ಇಲ್ಲಿ ಸಮರ್ಪಕ ಸೇವೆ ಲಭ್ಯವಾಗುವುದಿಲ್ಲ. ಸಕಾಲಕ್ಕೆ ವೈದ್ಯಕೀಯ ಸಿಬ್ಬಂದಿ ಇರುವುದಿಲ್ಲ ಎಂಬ ಕಾರಣಕ್ಕೆ ಬಹುತೇಕರು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಾರೆ.
ಇದರ ಮಧ್ಯೆ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಪತ್ನಿಯನ್ನು ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡುವ ಮೂಲಕ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಇದೀಗ ಅವರ ಪತ್ನಿ ಸರ್ಕಾರಿ ಆಸ್ಪತ್ರೆಯಲ್ಲಿ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಹೌದು, ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಮೀನಾ, ತಮ್ಮ ಪತ್ನಿ ಕನಿಷ್ಕಾ ಮೀನಾ ಅವರನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಿದ ಐಎಎಸ್ ಅಧಿಕಾರಿಯಾಗಿದ್ದಾರೆ. ಕನಿಷ್ಕಾ ಮೀನಾ ಅವರು ಹೆರಿಗೆಗೆ ಸಂಬಂಧಿಸಿದಂತೆ ತಪಾಸಣೆ, ಔಷದ ಎಲ್ಲವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪಡೆದಿದ್ದಾರೆ ಎಂಬುದು ಗಮನಾರ್ಹ ಸಂಗತಿ.
ಶುಕ್ರವಾರ ಬೆಳಗ್ಗೆ 8:56 ಕ್ಕೆ ಮಡಿಕೇರಿಯ ಕೊಡಗು ವೈದ್ಯಕೀಯ ಕಾಲೇಜಿನ ಬೋಧಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮೂಲಕ ಕನಿಷ್ಕಾ ಮೀನಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಪತ್ನಿಯ ಹೆರಿಗೆ ಬಳಿಕ ಮಾತನಾಡಿದ ಭನ್ವರ್ ಮೀನಾ, ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲರಿಗೂ ಉತ್ತಮ ಚಿಕಿತ್ಸೆ ದೊರಕುತ್ತದೆ. ಈ ಬಗ್ಗೆ ಅನುಮಾನ ಬೇಡ ಎಂದರು.