ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗಾಗಿ ನಾಳೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಇದೇ ದಿನದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದೇ ಸಂದರ್ಭದಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳು ಸಹ ಪ್ರಮಾಣವಚನ ಸ್ವೀಕರಿಸಬಹುದು ಎಂದು ಹೇಳಲಾಗುತ್ತಿದೆ.
ನಾಳಿನ ಪ್ರಮಾಣವಚನ ಸಮಾರಂಭಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ ಎಂದು ಹೇಳಲಾಗಿದ್ದು, ಹೀಗಾಗಿ ಸಿಇಟಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂಬ ಆತಂಕ ವ್ಯಕ್ತವಾಗಿತ್ತು.
ಇದೀಗ ಈ ಕುರಿತಂತೆ ವಿದ್ಯಾರ್ಥಿಗಳಿಗೆ ನೆಮ್ಮದಿಯ ಸುದ್ದಿ ಸಿಕ್ಕಿದ್ದು, ಸಿಇಟಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಪೊಲೀಸರಿಗೆ ತೋರಿಸಿದರೆ ಪರೀಕ್ಷಾ ಕೇಂದ್ರಕ್ಕೆ ಸುಗಮವಾಗಿ ತಲುಪಲು ಅನುಕೂಲ ಮಾಡಿಕೊಡುತ್ತಾರೆ ಎಂದು ತಿಳಿದು ಬಂದಿದೆ.