ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 23 ರಿಂದ ಮೂರು ದಿನಗಳ ಕಾಲ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗಿರಲಿಲ್ಲ. ಹೀಗಾಗಿ ಈ ಬಾರಿ ದಸರಾ ಉತ್ಸವದಂತೆ ಅದ್ದೂರಿಯಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ತಿಳಿದುಬಂದಿದೆ. ಇದಕ್ಕಾಗಿ ರಾಜ್ಯ ಸರ್ಕಾರ 20 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಿದೆ.
ಹಾವೇರಿಯ ಹಳೆ ನ್ಯಾಷನಲ್ ಹೈವೇ ರಸ್ತೆಯಲ್ಲಿರುವ ಗುದ್ಲೆಪ್ಪ ಹಳ್ಳಿಕೇರಿ ಕಾಲೇಜಿನ ಪಕ್ಕದಲ್ಲಿ 22 ಎಕರೆ ಜಾಗದಲ್ಲಿ ಸಮ್ಮೇಳನವನ್ನು ನಡೆಸಲಾಗುತ್ತಿದ್ದು, ಹಾವೇರಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರ ತವರು ಜಿಲ್ಲೆ ಕೂಡ ಎಂಬುದು ಗಮನಾರ್ಹ ಸಂಗತಿ.