ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿದ್ದು, ಮುಖ್ಯಮಂತ್ರಿ ಆಯ್ಕೆಗಾಗಿ ಕಸರತ್ತು ನಡೆಯುತ್ತಿದೆ. ಸಿಎಂ ರೇಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಪೈಪೋಟಿ ನಡೆದಿದ್ದು, ಇದೀಗ ವಿಚಾರ ಹೈಕಮಾಂಡ್ ಅಂಗಳಕ್ಕೆ ವರ್ಗಾವಣೆಯಾಗಿದೆ.
ಸಿದ್ದರಾಮಯ್ಯನವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಬೆಂಬಲಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಬೆಂಗಳೂರಿಗೆ ಭೇಟಿ ನೀಡಿದ್ದ ಕಾಂಗ್ರೆಸ್ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಇದರ ಮಧ್ಯೆ ಸೋಮವಾರದಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿರುವ ಡಿ.ಕೆ. ಶಿವಕುಮಾರ್, ನನಗೆ ಗೊತ್ತಿರುವುದು ನಮ್ಮ ಪಕ್ಷದಿಂದ ಆಯ್ಕೆಯಾದ 135 ಮಂದಿ ಮಾತ್ರ ಎಂದು ಹೇಳಿದ್ದರು.
ಇದರ ಮಧ್ಯೆ ಎನ್ ಡಿ ಟಿವಿಗೆ ನೀಡಿದ ಸಂದರ್ಶನದಲ್ಲಿ ‘ಸಿದ್ದರಾಮಯ್ಯ ಅವರಿಗೆ ಸಂಖ್ಯಾ ಬಲವಿದೆ. ಅವರಿಗೆ ಶುಭ ಕೋರುತ್ತೇನೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿರುವುದು ಅಚ್ಚರಿ ಮೂಡಿಸಿದೆ. ಕೆಲವೊಂದು ಮೂಲಗಳ ಪ್ರಕಾರ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರಿಗೆ ತಲಾ ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆಯನ್ನು ನೀಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.