ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ವಿಚಾರ ಈಗ ಹೈಕಮಾಂಡ್ ಮೆಟ್ಟಿಲೇರಿದ್ದು, ನೂತನ ಶಾಸಕರುಗಳೊಂದಿಗೆ ಸಮಾಲೋಚನೆ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ನವದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಗಳಾಗಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ತೆರಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇದರ ಮಧ್ಯೆ ಈಗಾಗಲೇ ದೆಹಲಿಯಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿ ಜೊತೆ ಸಮಾಲೋಚನೆ ನಡೆಸಿದ್ದು, ಈ ವೇಳೆ ಶಾಸಕರ ಅಭಿಪ್ರಾಯ ಹಾಗೂ ಸಮುದಾಯವನ್ನು ಗಮನಿಸಿ ಸಿದ್ದರಾಮಯ್ಯನವರಿಗೆ ಮೊದಲ ಅವಧಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದು ಸೂಕ್ತ ಎಂಬ ಅಭಿಪ್ರಾಯ ರಾಹುಲ್ ಗಾಂಧಿ ಅವರಿಂದ ವ್ಯಕ್ತವಾಗಿದೆ ಎನ್ನಲಾಗಿದೆ.
ಆದರೆ ವ್ಯತಿರಿಕ್ತ ಅಭಿಪ್ರಾಯ ಹೊಂದಿರುವ ಮಲ್ಲಿಕಾರ್ಜುನ ಖರ್ಗೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಸ್ಪರ್ಧಿಸುವುದು ಅನುಮಾನ. ಹೀಗಾಗಿ ಪಕ್ಷವನ್ನು ಈಗಿನಿಂದಲೇ ಬಲಪಡಿಸಲು ಯುವ ನಾಯಕತ್ವಕ್ಕೆ ಅಧಿಕಾರ ನೀಡಿದರೆ ಒಳ್ಳೆಯದು ಎಂಬ ನಿಲುವು ಹೊಂದಿದ್ದಾರೆ ಎನ್ನಲಾಗಿದೆ. ಇವೆಲ್ಲ ಅಂತೆಕಂತೆ ಸುದ್ದಿಗಳಾಗಿದ್ದು, ಅಂತಿಮವಾಗಿ ಹೈಕಮಾಂಡ್ ಅಧಿಕೃತವಾಗಿ ಘೋಷಿಸಿದ ಬಳಿಕವೇ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದು ತಿಳಿದು ಬರಲಿದೆ.