ಬೆಂಗಳೂರು: ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ್ದ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಕೃತ್ಯ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಸಹಸ್ರಾರು ಕರವೇ ಕಾರ್ಯಕರ್ತರು ಹೊರಟಿದ್ದಾರೆ.
ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಕರವೇ ಕಾರ್ಯಕರ್ತರು ಬೆಳಗಾವಿಗೆ ಆಗಮಿಸಿದ್ದಾರೆ. ಮಧ್ಯಾಹ್ನ 12ಕ್ಕೆ ಬೆಳಗಾವಿ ನಗರದಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಕಾರ್ಯಕರ್ತರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಿದ್ದಾಲೆ ಎಂದು ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಸಣ್ಣೀರಪ್ಪಹೇಳಿದ್ದಾರೆ.
ರಾಯಣ್ಣನ ಮೂರ್ತಿ ಧ್ವಂಸಗೊಳಿಸಿದ್ದ ಎಲ್ಲರ ಮೇಲೆ ಗೂಂಡಾ ಕಾಯ್ದೆ ಪ್ರಕರಣ ದಾಖಲಿಸಬೇಕು. ರಾಜ್ಯದಲ್ಲಿ ಈ ಎರಡೂ ಸಂಘಟನೆಗಳನ್ನು ನಿಷೇಧಿಸಬೇಕು. ಸಂಘಟನೆಗಳ ಮುಖಂಡರನ್ನು ಗಡಿಪಾರು ಮಾಡಬೇಕು ಎಂದು ಈ ಸಂದರ್ಭದಲ್ಲಿ ಕರವೇ ಮನವಿ ಮಾಡಿದೆ. ಈ ಘಟನೆಗೆ ಕರವೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಎಂಇಎಸ್ ಹಾಗೂ ಶಿವಸೇನೆಯನ್ನು ಭಯೋತ್ಪಾದಕ ಗುಂಪುಗಳು ಎಂದು ಹೇಳಿದೆ.