ನವದೆಹಲಿ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನಾಳಿನ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ತಮಿಳುನಾಡಿನ ಕುನ್ನೂರು ಬಳಿ ನೀಲಗಿರಿ ಬೆಟ್ಟದ ದಟ್ಟಕಾನನದಲ್ಲಿ ಇಂದು ಮಧ್ಯಾಹ್ನ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ.
ಈ ನಡುವೆ ಹೆಲಿಕಾಪ್ಟರ್ ದುರಂತದಲ್ಲಿ 11 ಜನರು ದುರ್ಮರಣಕ್ಕೀಡಾಗಿದ್ದು, ಘಟನಾ ಸ್ಥಳದಲ್ಲಿ 11 ಮೃತದೇಹಗಳು ಪತ್ತೆಯಾಗಿವೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳಿಗೆ ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಸೇನಾ ಮುಖ್ಯಸ್ಥರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದುರಂತ ಸುದ್ದಿ ತಿಳಿಯುತ್ತಿದ್ದಂತೆ ತುರ್ತು ಸಭೆ ನಡೆಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಭೆ ಬಳಿಕ ದೆಹಲಿಯಲ್ಲಿ ಬಿಪಿನ್ ರಾವತ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ರಾವತ್ ಅವರ ಪುತ್ರಿ ಹಾಗೂ ಕುಟುಂಬ ಸದಸ್ಯರ ಜತೆ ಮಾತುಕತೆ ನಡೆಸಿದ್ದಾರೆ.
ಈ ನಡುವೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನಾಳಿನ ಪೂರ್ವನಿಗದಿತ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ ಈ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.