ಬೆಳಗಾವಿ: ನಾಯಕತ್ವ ಬದಲಾವಣೆ ವಿಚಾರವಾಗಿ ಟಾಕ್ ಫೈಟ್ ತಾರಕಕ್ಕೇರಿದ್ದು, ಹೈಕಮಾಂಡ್ ನಿಂದ ಸ್ಪಷ್ಟ ಸಂದೇಶಕ್ಕೂ ಮುನ್ನವೇ ಸಿಎಂ ಬಿ.ಎಸ್.ಯಡಿಯೂರಪ್ಪ ಪರೋಕ್ಷ ಟಾಂಗ್ ನೀಡಿದ್ದು, ನಾಳಿನ ಕಾರ್ಯಕ್ರಮದಲ್ಲಿ ದಿಢೀರ್ ಬದಲಾವಣೆ ಮಾಡಿದ್ದಾರೆ.
ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಿಸುತ್ತಿರುವ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಇದೀಗ ನಾಳೆ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರುವುದಾಗಿ ಘೋಷಿಸಿದ್ದಾರೆ. ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಬದಲಾವಣೆ ಮಾಡಬೆಕೆಂದು ಅನಿಸಿಲ್ಲ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ನಾಳಿನ ಸಿಎಂ ತಮ್ಮ ಕಾರ್ಯಕ್ರಮ ಪಟ್ಟಿಯಲ್ಲಿ ದಿಢೀರ್ ಬದಲಾವಣೆ ಮಾಡಿಕೊಂಡಿದ್ದು, ನಾಳೆ ಮಧ್ಯಾಹ್ನ ಉತ್ತರ ಕನ್ನಡ ಜಿಲ್ಲಾ ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ತೆರಳುವುದಾಗಿ ತಿಳಿಸಿದ್ದಾರೆ.
ನಾಳೆಗೆ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನಾ ಕಾರ್ಯಕ್ರಮಗಳನ್ನು ಮಾತ್ರ ಆಯೋಜಿಸಲಾಗಿತ್ತು. ಆದರೆ ಇದೀಗ ಹೈಕಮಾಂಡ್ ಸ್ಪಷ್ಟ ಸಂದೇಶಕ್ಕೂ ಮುನ್ನವೇ ಸಿಎಂ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಘೋಷಿಸಿರುವುದು ಅಚ್ಚರಿಗೆ ಕಾರಣವಾಗಿದೆ.