ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಿಂದ ಶಿವಮೊಗ್ಗ ಬೆಚ್ಚಿಬಿದ್ದಿದೆ. ಶಿವಮೊಗ್ಗದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಬ್ಬರ ಮೇಲೆ ಒಬ್ಬರು ಆರೋಪ ಮಾಡುತ್ತಾ ಕುಳಿತಿದ್ದಾರೆ ಎಂದು ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗಿದೆ.
ಈ ವಿಚಾರವಾಗಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ಎಲ್ಲಾ ಬಿಜೆಪಿ ನಾಯಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದಾರೆ. ಈ ವೇಳೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಂದ ಹರ್ಷನ ಕೊಲೆ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಹರ್ಷನ ಪ್ರಕರಣವನ್ನ ದಾಳವಾಗಿಟ್ಟುಕೊಂಡು ಕಾಂಗ್ರೆಸ್ ಗೆ ತಿರುಗೇಟು ನೀಡಲು ಬಿಜೆಪಿ ರಣತಂತ್ರ ರಚಿಸುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ನಿಲುವನ್ನ ಮುಖ್ಯ ಅಂಶವಾಗಿಟ್ಟುಕೊಂಡು ಬಿಜೆಪಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ಕೊಡುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಬಹುಶಃ ಇಂದೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧದ ಪ್ರತಿಭಟನೆಗೆ ಕರೆ ನೀಡಬಹುದು ಎಂದು ಹೇಳಲಾಗುತ್ತಿದೆ.