ಶಿವಮೊಗ್ಗ: ಹಾಲಿ ಶಾಸಕರು ನಾವು ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿರದೇ ತಮ್ಮ ಕ್ಷೇತ್ರದ ಉದ್ದಗಲಕ್ಕೂ ಸಂಚರಿಸಿ ಮತದಾರರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ರಾಷ್ಟ್ರೀಯ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ ಹಿನ್ನಲೆಯಲ್ಲಿ ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ನನ್ನ ಮೇಲೆ ವಿಶ್ವಾಸವಿಟ್ಟು ಕೇಂದ್ರೀಯ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ. ಮುಂದಿನ ಚುನಾವಣೆಗೆ ರಾಜ್ಯದ ಉದ್ದಗಲಕ್ಕೂ ಸಂಚರಿಸಿ 150 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಿದಾಗ ಅವರೂ 150 ಸ್ಥಾನದ ಗುರಿ ನೀಡಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ರಾಜ್ಯ ಪ್ರವಾಸ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಪ್ರಯತ್ನ ನಡೆಸುತ್ತೇವೆ ಎಂದರು.
ಪ್ರಚಾರಕ್ಕೆ ನರೇಂದ್ರ ಮೊದಿಯವರೂ ಬರುವುದಾಗಿ ಹೇಳಿದ್ದಾರೆ. ಎಲ್ಲರನ್ನೂ ಸೇರಿಸಿಕೊಂಡು ಮತ್ತೆ ರಾಜ್ಯದಲ್ಲಿ ನಮ್ಮದೇ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಲ್ಲರೊಂದಿಗೆ ಮಾತನಾಡಿ ಶೀಘ್ರದಲ್ಲಿಯೇ ದಿನಾಂಕ ನಿಗದಿಪಡಿಸಿ ಶೀಘ್ರದಲ್ಲಿಯೇ ಶಿವಮೊಗ್ಗದಲ್ಲಿ ಬಿಜೆಪಿ ಸಮಾವೇಶ ನಡೆಸಲಾಗುವುದು. ಸಮಾವೇಶಕ್ಕೆ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಸೇರಿಸಲಾಗುವುದು. ತಿಂಗಳಿಗೊಮ್ಮೆ ರಾಜ್ಯಕ್ಕೆ ಖುದ್ದಾಗಿ ಬರುವುದಾಗಿ ಪ್ರಧಾನಿ ಅವರೇ ಹೇಳಿದ್ದಾರೆ. ಮೋದಿಜೀ ಅವರನ್ನು ಕರೆಸುವ ಕೆಲಸ ಮಾಡಲಾಗುವುದು ಎಂದರು.
ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟಾಧ್ಯಕ್ಷ ಜೆ.ಪಿ. ನಡ್ಡಾರವರಿಗೆ ಧನ್ಯವಾದ ಸಮರ್ಪಿಸುತ್ತೇನೆ ಎಂದು ಹೇಳಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಬೇಕೆಂಬುದು ಪ್ರಧಾನಿ ಮೋದಿ ಅವರ ಅಪೇಕ್ಷೆಯಾಗಿದ್ದು, ಆ ನಿಟ್ಟಿನಲ್ಲಿ ಪ್ರತಿ ತಿಂಗಳಿಗೊಮ್ಮೆ ರಾಜ್ಯಕ್ಕೆ ಭೇಟಿ ನೀಡುತ್ತೇನೆ ಎಂದು ಪ್ರಧಾನಿ ಹೇಳಿರುವುದರಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈಗಿನಿಂದಲೇ ಪಕ್ಷದ ಸಂಘಟನೆ ಹಾಗೂ ಚುನಾವಣೆಗೆ ಸಿದ್ಧರಾಗಬೇಕು ಎಂದು ಹೇಳಿದರು.
ಮಹಿಳಾ ಮೋರ್ಚಾ ಮತ್ತು ಯುವ ಮೋರ್ಚಾ ಬಲಪಡಿಸಬೇಕೆಂದು ಪ್ರಧಾನಿ ಸಲಹೆ ನೀಡಿದ್ದಾರೆ. ಅದರಂತೆ ಯುವಕರಲ್ಲಿ ಪಕ್ಷದ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡಿಸಬೇಕು ಎಂದರು.