ಗುಜರಾತಿನ ಅಮುಲ್ ಹಾಲು ಮತ್ತು ಅದರ ಉತ್ಪನ್ನಗಳನ್ನು ಮಾರಾಟ ಮಾಡಲು ಮುಂದಾಗಿರುವುದಕ್ಕೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡಲು ಹುನ್ನಾರ ನಡೆದಿದೆ ಎಂದು ಪ್ರತಿಪಕ್ಷಗಳ ನಾಯಕರು ಆರೋಪಿಸುತ್ತಿದ್ದಾರೆ.
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅಮುಲ್ ಹಾಲು ಮತ್ತು ಅದರ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಬಾರದು ಎಂದು ಪ್ರತಿಭಟನೆಗಳು ನಡೆಯುತ್ತಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಹ ಇದನ್ನೇ ಪ್ರತಿಪಾದಿಸುತ್ತಿದ್ದಾರೆ.
ಇದರ ಮಧ್ಯೆ ಹಾಸನದಲ್ಲಿ ನಂದಿನಿ ಹಾಲು, ತುಪ್ಪ, ಸಿಹಿ ಖರೀದಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಥಳದಲ್ಲಿದ್ದವರಿಗೆ ಹಂಚಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಂದಿನಿ ನಮ್ಮವಳು. ನಮ್ಮ ಹಾಲು, ನಮ್ಮ ಬದುಕು, ನಮ್ಮ ರೈತರು ಎಂದರಲ್ಲದೆ ರೈತರನ್ನು ಉಳಿಸಿಕೊಳ್ಳಬೇಕಿದೆ. ಸರ್ಕಾರ ಯಾವುದೇ ಕಾರಣಕ್ಕೂ ಅಮುಲ್ ಹಾಲಿನ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಬಾರದು ಎಂದರು.