ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮಾಜಿ ಸಚಿವ ಎಚ್.ಡಿ. ರೇವಣ್ಣನವರ ಪತ್ನಿ ಭವಾನಿ ರೇವಣ್ಣ ಹಾಗೂ ಮಾಜಿ ಶಾಸಕ ಪ್ರಕಾಶ್ ಅವರ ಪುತ್ರ ಸ್ವರೂಪ್ ಆಕಾಂಕ್ಷಿಗಳಾಗಿದ್ದಾರೆ. ಹೀಗಾಗಿ ಈ ಕ್ಷೇತ್ರದ ಟಿಕೆಟ್ ವಿಚಾರ ಜೆಡಿಎಸ್ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿದೆ.
ಸ್ವರೂಪ್ ಅವರಿಗೆ ಟಿಕೆಟ್ ನೀಡಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಒಲವು ತೋರಿಸುತ್ತಿರುವರಾದರೂ ಅಂತಿಮವಾಗಿ ಈ ಕುರಿತು ಪಕ್ಷದ ವರಿಷ್ಠ ದೇವೇಗೌಡರೇ ತೀರ್ಮಾನ ಕೈಗೊಳ್ಳಲಿದ್ದಾರೆ. ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.
ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಾವು ಕ್ಷೇತ್ರದ ಜೆಡಿಎಸ್ ಮುಖಂಡ ಸ್ವರೂಪ್ ಜೊತೆಗೆ ಮಾತುಕತೆ ನಡೆಸುತ್ತಿದ್ದು, ಅವರು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಮೂಲಗಳ ಪ್ರಕಾರ ಒಂದು ವೇಳೆ ಸ್ವರೂಪ್ ಅವರಿಗೆ ಜೆಡಿಎಸ್ ಟಿಕೆಟ್ ಸಿಗದಿದ್ದರೆ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆದು ಅಭ್ಯರ್ಥಿಯನ್ನಾಗಿಸುವ ಲೆಕ್ಕಾಚಾರ ಇದರ ಹಿಂದಿದೆ ಎನ್ನಲಾಗಿದೆ.