ಹಾಸ್ಟೆಲ್ನಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಿದ 30 ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆಯು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಚಿತ್ತೂರು ಜಿಲ್ಲೆಯ ಕುಪ್ಪಂ ಪುರಸಭೆಯ ಅಕ್ಕ ಮಹಾದೇವಿ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ.
ಹಾಸ್ಟೆಲ್ನಲ್ಲಿ ಮಧ್ಯಾಹ್ನದ ಊಟದ ವೇಳೆಯಲ್ಲಿ ಆಹಾರ ಸೇವಿಸಿದ ವಿದ್ಯಾರ್ಥಿಗಳು ಬಳಿಕ ಅಸ್ವಸ್ಥರಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಾಸ್ಟೆಲ್ ಇದೇ ಕುಪ್ಪಂ ಪುರಸಭೆಯ ದ್ರಾವಿಡ ವಿಶ್ವವಿದ್ಯಾಲಯದ ಭಾಗವಾಗಿದೆ. ಕುಪ್ಪಂ ಆಂಧ್ರಪ್ರದೇಶದ ವಿಪಕ್ಷ ನಾಯಕ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡುರ ಕ್ಷೇತ್ರವಾಗಿದೆ.
ಅಸ್ವಸ್ಥರಾಗಿದ್ದ 30 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಲ್ಲಿ 17 ವಿದ್ಯಾರ್ಥಿಗಳನ್ನು ಬಳಿಕ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿನಿಯರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅಲ್ಲದೇ ಘಟನೆಗೆ ಕಾರಣವೇನೆಂದು ತಕ್ಷಣವೇ ತನಿಖೆ ಆರಂಭಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.