ಹುಬ್ಬಳ್ಳಿ: ಹುಬಳ್ಳಿ ಧಾರವಾಡ ಅವಳಿ ನಗರಗಳ ನಡುವೆ ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚುತ್ತಿದ್ದು, ಜನರ ಓಡಾಟವೂ ಹೆಚ್ಚಾಗುತ್ತಿದೆ. ಈ ಸಮಸ್ಯೆ ನೀಗಿಸಲು ಸರ್ಕಾರ ಹೊಸ ಯೋಜನೆ ಜಾರಿಗೆ ತರಲು ಮುಂದಾಗಿದೆ.
ಹುಬ್ಬಳ್ಳಿ-ಧಾರವಾಡ ನಗರಗಳ ನಡುವೆ ಲಘು ರೈಲು ಸಂಚಾರಕ್ಕೆ ಯೋಜನೆ ರೂಪಿಸಲಾಗಿದೆ. ಈ ಯೋಜನೆ ದೇಶದಲ್ಲಿಯೇ ಮೊದಲ ಯೋಜನೆಯಾಗಿದ್ದು, ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ.
ಈಗಾಗಲೇ ಹುಬ್ಬಳ್ಳಿ-ಧಾರವಾಡ ನಡುವೆ ಬಿ ಆರ್ ಟಿ ಎಸ್ ಬಸ್ ಗಳು ಸಂಚರಿಸುತ್ತಿವೆ. ಇವುಗಳ ಜೊತೆಗೆ ಜನರ ಅನುಕೂಲಕ್ಕಾಗಿ ಹಾಗೂ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಲಘು ರೈಲು ಸಂಚಾರ ಆರಂಭಿಸಲು ಯೋಜನೆ ರೂಪಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, ಲಘು ರೈಲು ಸಾರಿಗೆ ಯೋಜನೆ ಬಗ್ಗೆ ಕಾರ್ಯತಂತ್ರ ರೂಪಿಸಲಾಗಿದ್ದು, ನಾಲ್ಕು ವಾರಗಳಲ್ಲಿ ಪ್ರಸ್ತಾವನೆ ಸಿದ್ಧವಾಗಲಿದೆ. ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ-ಪಿಪಿಪಿ ಮಾದರಯಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಅಂದುಕೊಂಡಂತೆ ಆದರೆ ಕೇವಲ ಒಂದುವರೆ ವರ್ಷದಲ್ಲಿ ಈ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಬಳಿಕ ಜನರು ವಾಸ್ತವ್ಯಕ್ಕಾಗಿ ಹಾಗೂ ಕೈಗಾರಿಕಾ ಉದ್ದೇಶಗಳಿಗಾಗಿ ಹುಬ್ಬಳ್ಳಿ-ಧಾರವಾಡ ಆಯ್ಕೆ ಮಾಡಿಕೊಳ್ಳುತ್ತಾರೆ. ಅವಳಿನಗರ ಮುಂದಿನ ಹತ್ತು ವರ್ಷಗಳಲ್ಲಿ ವೇಗವಾಗಿ ಬೆಳೆಯಲಿದೆ. ಹೀಗಾಗಿ ಅಭಿವೃದ್ಧಿ ದೃಷ್ಟಿಯಿಂದ ಇಂತದ್ದೊಂದು ಮಹತ್ವದ ಯೋಜನೆ ಜಾರಿಗೊಳಿಸುವ ಅಗತ್ಯವಿದೆ ಎಂದು ವರದಿಯನ್ನೂ ಸಲ್ಲಿಸಲಾಗಿದೆ ಎಂದರು.