
ನಾಳೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಈಗಾಗಲೇ ಅದ್ದೂರಿ ಸಿದ್ದತೆ ನಡೆದಿದ್ದು, ಕೆಲ ಸಚಿವರುಗಳು ಸಹ ಅಂದೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದರ ಮಧ್ಯೆ ಬೆಂಗಳೂರಿನಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿಯಲ್ಲ. ಆದರೆ ಹೈಕಮಾಂಡ್ ಯಾವುದಾದರೂ ಜವಾಬ್ದಾರಿ ವಹಿಸಿಕೊಟ್ಟರೆ ಅದನ್ನು ನಿರ್ವಹಿಸಲು ಸಿದ್ಧ ಎಂಬ ಮಹತ್ವದ ಹೇಳಿಕೆ ನೀಡಿದ್ದಾರೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಜಗದೀಶ್ ಶೆಟ್ಟರ್ ತಮಗೆ ಅವಕಾಶ ನಿರಾಕರಿಸಿದ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರು ಚುನಾವಣಾ ಕಣಕ್ಕಿಳಿದರೂ ಸಹ ಪರಾಭವಗೊಂಡಿದ್ದು, ಆದರೆ ಸಿದ್ದರಾಮಯ್ಯನವರ ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಅವರಿಗೂ ಅವಕಾಶ ಸಿಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.