ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಆರ್ಭಟ ಜೋರಾಗಿದೆ. ಅದರಲ್ಲೂ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿದ್ದು ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದರ ಮಧ್ಯೆ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇಗುಲಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಳಸ ತಾಲೂಕಿನಲ್ಲಿ ವ್ಯಾಪಕ ಮಳೆ ಆಗುತ್ತಿರುವ ಕಾರಣ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಹೊರನಾಡು ದೇವಸ್ಥಾನದ ರಸ್ತೆ ಸಂಪರ್ಕ ಕಡಿತಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಹ ಇಂದು ಮುಂಜಾನೆಯಿಂದಲೇ ಮಳೆಯಾಗುತ್ತಿದ್ದು, ಮಂಗಳೂರಿನಲ್ಲೂ ಸಹ ಮೋಡ ಕವಿದ ವಾತಾವರಣವಿರುವುದರಿಂದ ಜನತೆ ಆತಂಕಿತರಾಗಿದ್ದಾರೆ. ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮಂಗಳೂರು ನಗರ ಜಲಾವೃತವಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.